ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Aug 18, 2024, 01:50 AM IST
ಪ್ರತಿಭಟನೆ | Kannada Prabha

ಸಾರಾಂಶ

ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಈ ರೀತಿ ತಂತ್ರಗಾರಿಕೆ ಮಾಡುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಹುಬ್ಬಳ್ಳಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು. ಈ ವೇಳೆ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಜಮೆಯಾದ ಕಾಂಗ್ರೆಸ್‌ ಕಾರ್ಯಕರ್ತರು, ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ಶಾಸಕ ಎನ್‌.ಎಚ್‌.ಕೋನರಡ್ಡಿ ಮಾತನಾಡಿ, ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಈ ರೀತಿ ತಂತ್ರಗಾರಿಕೆ ಮಾಡುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಖಂಡನೀಯ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಮುಖ್ಯಮಂತ್ರಿಗಳಿಗೆ ಮುಡಾ ವಿಷಯದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಕೇಂದ್ರ ಸರ್ಕಾರ ನಡೆಸಿರುವ ಸಂಚು. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ನಾಯಕರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ.ರಾಜ್ಯಪಾಲರ ನಡೆ ಖಂಡಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆ.19ರಂದು ಪ್ರತಿಭಟನೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಸತ್ಯಶೋಧನಾ ಸಮಿತಿ ಅಧ್ಯಕ್ಷ, ಶಾಸಕ ಅಪ್ಪಾಜಿಗೌಡ ನಾಡಗೌಡ್ರ ಹೇಳಿದರು.

ಮಾಜಿ ಸಂಸದ ಎಲ್. ಹನಮಂತಯ್ಯ ಮಾತನಾಡಿ, ದೇಶದಲ್ಲಿ ಇತರೇ ಪಕ್ಷಗಳ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಕಿತ್ತು ಹಾಕುವ ಕೆಲಸ ಕೆಲಸ ಬಿಜೆಪಿ ಮಾಡುತ್ತಿದೆ. ಇದೇ ರೀತಿ ಪ್ರಯತ್ನವನ್ನು ಕರ್ನಾಟಕದಲ್ಲೂ ನಡೆಸುತ್ತಿದೆ ಎಂದರು. ಬಳಿಕ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಪರಮೇಶ್ವರ ನಾಯ್ಕ, ಮಾಜಿ ಸಭಾಪತಿ ಡೆವಿಡ್ ಸಿಮೋನ್, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನೀಲಕುಮಾರ ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಶರಣಪ್ಪ ಕೊಟಗಿ, ಮುಖಂಡರಾದ ಸಿದ್ದು ತೇಜಿ, ಬಾಬಾಜಾನ ಮುಧೋಳ, ಶಿವಾನಂದ ಮುತ್ತಣ್ಣವರ, ಸಂಜೀವ ಧುಮಕನಾಳ ಸೇರಿದಂತೆ ಹಲವರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ