ಶಿಶುವಿಗೆ ಅಗತ್ಯ ಲಸಿಕೆ ನೀಡಲು ಪಾಲಕರ ಮನವೊಲಿಸಿ: ಡಾ.ಹನುಮಂತಪ್ಪ

KannadaprabhaNewsNetwork |  
Published : Sep 11, 2024, 01:04 AM IST
ಬಳ್ಳಾರಿಯ ಅಲ್ಲಂ ಗೋಕುಲಂ ಭವನದಲ್ಲಿ ವೈದ್ಯಾಧಿಕಾರಿಗಳು ಮತ್ತು ಕ್ಷೇತ್ರ ಸಿಬ್ಬಂದಿಯವರಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಮಾತನಾಡಿದರು.  | Kannada Prabha

ಸಾರಾಂಶ

ಮಗುವಿಗೆ ಬಾಲ್ಯಾವಧಿ ಕಾಡುವ ಪೋಲಿಯೋ, ಬಾಲಕ್ಷಯ, ಕಾಮಾಲೆ, ಗಂಟಲು ಮಾರಿ, ನಾಯಿಕೆಮ್ಮು, ಮಿದುಳುಜ್ವರ, ಇರುಳಗಣ್ಣು, ಧನುರ್ವಾಯು ಸೇರಿದಂತೆ ಮಾರಕ ರೋಗಗಳ ನಿಯಂತ್ರಣಕ್ಕೆ ಪೂರಕ ಲಸಿಕೆಗಳನ್ನು ಒಂದು ವರ್ಷದೊಳಗೆ ಹಾಕಿಸಬೇಕು ಎಂದು ಡಾ.ಹನುಮಂತಪ್ಪ ಹೇಳಿದರು.

ಬಳ್ಳಾರಿ: ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ 12 ಮಾರಕ ರೋಗಗಳ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಯಸ್ಸಿಗನುಸಾರವಾಗಿ ನೀಡುವ ಲಸಿಕೆಗಳನ್ನು ತಪ್ಪದೇ ಕೊಡಿಸಲು ಪಾಲಕರ ಮನವೊಲಿಸಿ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಆರೋಗ್ಯ ಸಂಸ್ಥೆ ಬಳ್ಳಾರಿ ವಲಯ ಕಚೇರಿ ವತಿಯಿಂದ ನಗರದ ಅಲ್ಲಂ ಗೋಕುಲಂ ಭವನದಲ್ಲಿ ವೈದ್ಯಾಧಿಕಾರಿಗಳು ಮತ್ತು ಕ್ಷೇತ್ರ ಸಿಬ್ಬಂದಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಗುವಿಗೆ ಬಾಲ್ಯಾವಧಿ ಕಾಡುವ ಪೋಲಿಯೋ, ಬಾಲಕ್ಷಯ, ಕಾಮಾಲೆ, ಗಂಟಲು ಮಾರಿ, ನಾಯಿಕೆಮ್ಮು, ಮಿದುಳುಜ್ವರ, ಇರುಳಗಣ್ಣು, ಧನುರ್ವಾಯು ಸೇರಿದಂತೆ ಮಾರಕ ರೋಗಗಳ ನಿಯಂತ್ರಣಕ್ಕೆ ಪೂರಕ ಲಸಿಕೆಗಳನ್ನು ಒಂದು ವರ್ಷದೊಳಗೆ ಹಾಕಿಸಬೇಕು. ಇವುಗಳ ಮಹತ್ವ ಕುರಿತು ಪೋಷಕರಿಗೆ ತಿಳಿಸಿ ಹೇಳಬೇಕು ಎಂದರು.ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ. ಆರ್.ಎಸ್. ಶ್ರೀಧರ ಅವರು ಮಾತನಾಡಿ, ಪೋಲಿಯೋ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ದಡಾರ-ರೂಬೆಲ್ಲಾ ಮೆದುಳು ಜ್ವರಕ್ಕೆ 16 ರಿಂದ 23 ತಿಂಗಳು ಒಳಗೆ ಹೆಚ್ಚುವರಿಯಾಗಿ ಬೂಸ್ಟರ್ ಡೋಸ್ ರೂಪದಲ್ಲಿ ನೀಡಲಾಗುವುದು. 5 ರಿಂದ 6 ವರ್ಷದಲ್ಲಿ ಪುನಃ ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ರೋಗಿಗಳಿಗೆ ಎರಡನೇಯ ಬಾರಿ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ. ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ವೀರೇಂದ್ರ ಕುಮಾರ್, ಹಿರಿಯ ವೈದ್ಯ ಡಾ. ನರಸಿಂಹಮೂರ್ತಿ, ಭಾರತೀಯ ಮಕ್ಕಳ ತಜ್ಞರ ಸಂಘದ ಡಾ. ಸುನೀಲ್, ಡಿಎನ್‌ಒ ಗಿರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಈರಣ್ಣ, ಡಾ. ಭರತ್, ಡಾ. ಅರುಣ್, ಡಾ. ಮಂಜುನಾಥ ಜವಳಿ ಸೇರಿದಂತೆ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಧರ್ಮಸ್ಥಳ ಕೇಸ್‌ : ಅರ್ಧ ಕೋಟಿ ವ್ಯಯ?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ