)
ಕನ್ನಡಪ್ರಭ ವಾರ್ತೆ ನವದೆಹಲಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಕಂಬಳ’ ನಡೆಸುವುದನ್ನು ಪ್ರಶ್ನಿಸಿ ಎನ್‌ಜಿಒ ಪೇಟಾ (ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಸುಪ್ರೀಂಕೋರ್ಟ್‌ನ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು.
ಕಂಬಳ, ಕರಾವಳಿಯ ಸಂಸ್ಕೃತಿಯೊಂದಿಗೆ ಮಿಳಿತಗೊಂಡಿದೆ. ಈ ಕ್ರೀಡೆಗೂ, ಬೆಂಗಳೂರಿನ ಸಂಪ್ರದಾಯ ಮತ್ತು ಸಂಸ್ಕೃತಿಗೂ ಯಾವುದೇ ಸಂಬಂಧವಿಲ್ಲ. ಆದರೂ, ಈಗ, ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಹೀಗಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ಕಂಬಳ ನಡೆಸುವುದಕ್ಕೆ ನಿಷೇಧ ಹೇರಬೇಕು ಎಂದು ಪೇಟಾ ಪರ ವಕೀಲರು ವಾದ ಮಂಡಿಸಿದರು.ಪೇಟಾ ವಾದ ತಳ್ಳಿ ಹಾಕಿದ ಸುಪ್ರೀಂಕೋರ್ಟ್, ಸಾಂಪ್ರದಾಯಿಕ ಕ್ರೀಡೆಯನ್ನು ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿತು. ಕರಾವಳಿಯ ಜನ ರಾಜ್ಯದ ವಿವಿಧ ಭಾಗಗಳಲ್ಲಿ ತಮ್ಮ ಸಂಸ್ಕೃತಿಯನ್ನು ಪ್ರದರ್ಶಿಸಲು ಬಯಸಿದರೆ ಅದರಲ್ಲಿ ತಪ್ಪೇನು?. ರಾಜ್ಯದ ಇತರ ಭಾಗಗಳ ಜನರಿಗೂ ಅವರ ಸಂಸ್ಕೃತಿ ಪರಿಚಯವಾಗಲಿ ಎಂದು ಅಭಿಪ್ರಾಯಪಟ್ಟಿತು.