ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಸೌಂದರ್ಯಿಕರಣಕ್ಕಾಗಿ ಸ್ವಚ್ಛತೆ, ರಸ್ತೆ ನಿರ್ಮಾಣ, ಉದ್ಯಾನಗಳ ನಿರ್ವಹಣೆ ಸೇರಿದಂತೆ ನಗರದಲ್ಲಿ ಜನದಟ್ಟಣೆ ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಮುಂದಾಗಿದ್ದಾರೆ. ಅಲ್ಲದೇ, ಈ ನಿಟ್ಟಿನಲ್ಲಿ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಕಾರ್ ಪಾರ್ಕಿಂಗ್ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸೂಕ್ತವಾದ ಯೋಜನೆ ರೂಪಿಸಿಕೊಂಡು ವಿಜಯಪುರ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡಬೇಕಿದೆ. ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಗರದ ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ರೂಪಿಸಿರುವ ಅಡ್ವಾನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ನ್ನು ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ವಿಜಯಪುರ ನಗರದಲ್ಲಿ ಮಳೆಗಾಲದಲ್ಲಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳಾದ ಸರ್ಕಾರಿ ಆಸ್ತಿ, ರಾಜ ಕಾಲುವೆ ಪ್ರದೇಶದಲ್ಲಿನ ರಾಜಕಾಲುವೆ ನಿರ್ಮಾಣದ ಅನುಷ್ಠಾನದಲ್ಲಿ ಉಂಟಾದ ನ್ಯಾಯಾಲಯದ ತಡೆಯಾಜ್ಞೆಯನ್ನು ಪ್ರಥಮ ಆದ್ಯತೆ ಮೇಲೆ ತೆರವುಗೊಳಿಸಲು ಕ್ರಮವಹಿಸಬೇಕು. ತಡೆಯಾಜ್ಞೆ ತೆರವಾದ ನಂತರ ಅತಿಕ್ರಮಣ ಕಟ್ಟಡಗಳನ್ನು ತೆರವುಗೊಳಿಸಿ ರಾಜಕಾಲುವೆ ಕಾಮಗಾರಿ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಹೋಗಿ ಬರಲು ಪಾಲಿಕೆ ವ್ಯಾಪ್ತಿಯ ಹಾಗೂ ಪ್ರಾಧಿಕಾರದ ವ್ಯಾಪ್ತಿಯ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ತಕ್ಷಣ ಆರ್ಥಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದು, ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಹೇಳಿದರು.ಪ್ರಾಧಿಕಾರ ಆಕರಿಸುವ ತೆರಿಗೆ ಸಂಗ್ರಹಣೆ ಸೇರಿದಂತೆ ವಿವಿಧ ಆದಾಯವನ್ನು ಮುಖ್ಯವಾಗಿ ಕುಡಿಯುವ ನೀರು, ಒಳಚರಂಡಿಗೆ ಆದ್ಯತೆ ನೀಡಿ ವೆಚ್ಚ ಮಾಡಬೇಕು. ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಲಾಲ್ ಬಹಾದ್ದೂರ ಶಾಸ್ತ್ರಿ ಮಾರುಕಟ್ಟೆ ಅಭಿವೃದ್ದಿಗೆ ಸೂಕ್ತ ಕ್ರಿಯಾಯೋಜನೆಯೊಂದನ್ನು ರೂಪಿಸಬೇಕು. ನಗರದಲ್ಲಿರುವ ಬೀದಿ ದೀಪಗಳ ಸೂಕ್ತ ನಿರ್ವಹಣೆ ಮಾಡಬೇಕು. ಅವಶ್ಯಕತೆ ಇರುವ ಕಡೆ ಬೀದಿ ದೀಪಗಳ ಅಳವಡಿಕೆ ಮಾಡಬೇಕು. ಪುನರ್ವಸತಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಎಂ.ಬಿ.ಪಾಟೀಲ ನಿರ್ದೇಶನ ನೀಡಿದರು.
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಹಾದೇವ ರಾಠೋಡ, ಸಲೀಮ ಪೀರಜಾದೆ, ಸಂತೊಷ ಪವಾರ, ಕಾಶಿಬಾಯಿ ಹಡಪದ ಸೇರಿದಂತೆ ಹಲವರು ಹಾಜರಿದ್ದರು.--------ಕೋಟ್
ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅನುಮತಿ ಪಡೆದ ನಿವೇಶನಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಬೇಕು. ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮವಹಿಸಬೇಕು. ಪ್ರಾಧಿಕಾರ ಆಕರಿಸುವ ತೆರಿಗೆ ಸಂಗ್ರಹಣೆ ಸೇರಿದಂತೆ ವಿವಿಧ ಆದಾಯವನ್ನು ಮುಖ್ಯವಾಗಿ ಕುಡಿಯುವ ನೀರು, ಒಳಚರಂಡಿಗೆ ಆದ್ಯತೆ ನೀಡಿ ವೆಚ್ಚ ಮಾಡಬೇಕು.- ಎಂ.ಬಿ.ಪಾಟೀಲ, ಉಸ್ತುವಾರಿ ಸಚಿವ