ಕನ್ನಡಪ್ರಭವಾರ್ತೆ, ಹಾಸನ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿಯೋಗದಲ್ಲಿ ನಾನು, ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿ ಪ್ರಮುಖರು ಭಾಗವಹಿಸಿದ್ದೆವು. ಮೊದಲಿಗೆ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಪರಿಸ್ಥಿತಿ ಗಂಭೀರತೆ ವಿವರಿಸಲಾಯಿತು. ಬಳಿಕ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ, ಅವರ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುವಂತೆ ಮನವಿ ಮಾಡಲಾಯಿತು ಎಂದರು. ಇದಲ್ಲದೆ, ಸರ್ಫೆಸಿ ಕಾಯ್ದೆಯ ವ್ಯಾಪ್ತಿಯಿಂದ ಕಾಫಿ ಬೆಳೆಗಾರರನ್ನು ಹೊರಗಿಡಲು ಹಾಗೂ ಈ ಸಂಬಂಧ ಉಂಟಾಗಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರುವಂತೆ ಒತ್ತಾಯಿಸಲಾಯಿತು. ಸರ್ಫೆಸಿ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನು ಸಹಾಯ ನೀಡುವಂತೆ ಕೇಳಿಕೊಳ್ಳಲಾಗಿದ್ದು, ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಕಾಫಿ ಮಂಡಳಿಯ ಮೂಲಕ ನೀಡಲಾಗುವ ಸಹಾಯಧನವನ್ನು ಹೆಚ್ಚಿಸುವ ಬೇಡಿಕೆಗೆ ಸ್ಪಂದಿಸಿದ ವಾಣಿಜ್ಯ ಸಚಿವರು, ೧೩ನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ ಶೇ.೨೦ರಷ್ಟು ಹೆಚ್ಚಳ ಮಾಡಿರುವುದಾಗಿ ತಿಳಿಸಿ, ಅದನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಮಾರ್ಚ್ ೧೭ರಂದು ನಿಯೋಗವು ಕೇಂದ್ರ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಇಲಾಖೆ ಪ್ರಧಾನ ಮಹಾ ನಿರ್ದೇಶಕ ಹಾಗೂ ವಿಶೇಷ ಕಾರ್ಯದರ್ಶಿ ಸುಶೀಲ್ ಕುಮಾರ್ ಅವಸ್ತಿ ಹಾಗೂ ಹೆಚ್ಚುವರಿ ಪ್ರಧಾನ ನಿರ್ದೇಶಕ ರಮೇಶ್ ಕುಮಾರ್ ಪಾಂಡೆ ಅವರನ್ನು ಭೇಟಿ ಮಾಡಿ ಮಾನವ-ಕಾಡಾನೆ ಸಂಘರ್ಷದ ಕುರಿತು ವಿವರವಾದ ಚರ್ಚೆ ನಡೆಸಿತು. ಕ್ಯಾಂಸ್ಕೋ ನಿಧಿಯನ್ನು ಬಳಸಿ ಮಲೆನಾಡಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸುವಂತೆ ಮನವಿ ಮಾಡಲಾಯಿತು ಎಂದರು. ಈ ಕುರಿತು ಪ್ರತಿಕ್ರಿಯಿಸಿದ ಸುಶೀಲ್ ಕುಮಾರ್ ಅವಸ್ತಿ ಅವರು, ರಾಜ್ಯ ಸರ್ಕಾರದಿಂದ ಈಗಾಗಲೇ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆನೆಗಳ ಸ್ಥಳಾಂತರ ಹಾಗೂ ನಿರ್ವಹಣೆ ಕುರಿತು ಸಂಪೂರ್ಣ ಯೋಜನಾ ವರದಿ ಎರಡು ತಿಂಗಳೊಳಗೆ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಹಾಸನ ಸೇರಿದಂತೆ ಕಾಡಾನೆ ಸಮಸ್ಯೆ ಇರುವ ಪ್ರದೇಶಗಳಿಗೆ ಒಂದು ತಿಂಗಳೊಳಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸಹಕರಿಸಿದ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೋಟಾ ಶ್ರೀನಿವಾಸ್ ಪೂಜಾರಿ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಾ. ಮಂಜುನಾಥ್, ಸಂಸದ ತೇಜಸ್ವಿ ಸೂರ್ಯ ಹಾಗೂ ಮಲ್ಲೇಶ್ ಬಾಬು ಸೇರಿದಂತೆ ಎಲ್ಲರಿಗೂ ಮೂರು ಜಿಲ್ಲೆಯ ಕಾಫಿ ಬೆಳೆಗಾರರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕೆಜಿಎಫ್ ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷ ನಾಗರಾಜು, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಬೇಲೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಕುಮಾರ್ ಇತರರು ಉಪಸ್ಥಿತರಿದ್ದರು.