ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ ಅಗತ್ಯ: ಟಿ.ಜಿ.ಪ್ರೇಮಕುಮಾರ್

KannadaprabhaNewsNetwork |  
Published : May 27, 2025, 11:57 PM ISTUpdated : May 27, 2025, 11:58 PM IST
ಕೊಡಗು ವಿ.ವಿ.ಆವರಣದಲ್ಲಿ ಎನ್ನೆಸ್ಸೆಸ್ ಶಿಬಿರದಲ್ಲಿ ಪರಿಸರ ಕಾರ್ಯಕ್ರಮ: ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ ಅಗತ್ಯಟಿ.ಜಿ.ಪ್ರೇಮಕುಮಾರ್ | Kannada Prabha

ಸಾರಾಂಶ

ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು ಎಂದು ಗಣ್ಯರು ತಿಳಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು. ಕಾನೂನಿನ ಹೊರತಾಗಿಯೂ ವೈಯಕ್ತಿಕವಾಗಿ ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಮಾಲಿನ್ಯಕಾರಿ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯ ವಸ್ತುಗಳ ಬಳಕೆ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು.ಸೋಮವಾರಪೇಟೆಯ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಯ ವಾರ್ಷಿಕ ಶಿಬಿರದಲ್ಲಿ "ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತ ಜಾಗೃತಿ ಆಂದೋಲನದಲ್ಲಿ ಪ್ಲಾಸ್ಟಿಕ್ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ನಮಗೆಲ್ಲರಿಗೂ ಒಂದು ದೊಡ್ಡ ಸಮಸ್ಯೆಯಾಗಿದೆ. ಪ್ರತಿ ವರ್ಷ, ಲಕ್ಷಾಂತರ ಟನ್ ಪ್ಲಾಸ್ಟಿಕ್ ತ್ಯಾಜ್ಯವು ಸಾಗರಗಳ ಮೇಲೆ ಪರಿಣಾಮ ಬೀರುತ್ತದೆ, ನದಿಗಳು ಮತ್ತು ಸುಂದರವಾದ ಭೂದೃಶ್ಯಗಳನ್ನು ಕಲುಷಿತಗೊಳಿಸುತ್ತದೆ. ಈ ಕಸದ ರಾಶಿಯು ನಮ್ಮ ಪ್ರಕೃತಿ ಮತ್ತು ನಮಗೂ ನೋವುಂಟು ಮಾಡುತ್ತದೆ. ಈ ದೊಡ್ಡ ಸಮಸ್ಯೆಯನ್ನು ಸರಿಪಡಿಸಲು, ನಾವೆಲ್ಲರೂ ನಮ್ಮ ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯವಾಗಿ ಬಟ್ಟೆ, ಕಾಗದ, ಸೆಣಬಿನಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಪರಿಸರದಲ್ಲಿ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ಮಾಡಬೇಕಿದೆ ಎಂದು ಪ್ರೇಮಕುಮಾರ್ ಮನವಿ ಮಾಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿ, ಎನ್ನೆಸ್ಸೆಸ್ ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಮ್ಮನ್ನು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಷ್ಟ್ರೀಯ ಸಮಗ್ರತೆ ಹಾಗೂ ಭಾವೈಕ್ಯತೆಯನ್ನು ಎತ್ತಿ ಹಿಡಿಯುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಎನ್ನೆಸ್ಸೆಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಎಂ.ಎಸ್.ಶಿವಮೂರ್ತಿ ಮಾತನಾಡಿ, ಎನ್ನೆಸ್ಸೆಸ್ ಶಿಬಿರದಲ್ಲಿ ಕೈಗೊಂಡಿರುವ ಶ್ರಮದಾನ ಹಾಗೂ ಸೇವಾ ಕಾರ್ಯಕ್ರಮಗಳ ಕುರಿತು ವಿವರಿಸಿದರು.ವಿಶ್ವವಿದ್ಯಾಲಯಯದ ಕನ್ನಡ ವಿಭಾಗದ ಉಪನ್ಯಾಸಕ ಡಾ.ಜಮೀರ್ ಅಹ್ಮದ್, ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ ಯೋಗೇಶ್ ಮಾತನಾಡಿದರು. ಬಿಟಿಸಿಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಚ್.ಹುಚ್ಚೇಗೌಡ,ಸೋಮವಾರಪೇಟೆ ಜೆಸಿಐ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್.ವಸಂತ್ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಇದ್ದರು. ಇದೇ ವೇಳೆಯಲ್ಲಿ ಪರಿಸರ ಸಂಯೋಜಕ ಟಿ.ಜಿ.ಪ್ರೇಮಕುಮಾರ್ , ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ