ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಜಾಥಾ ಅಭಿಯಾನ

KannadaprabhaNewsNetwork |  
Published : Jul 27, 2026, 01:30 AM IST
ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸುರಪುರ ವತಿಯಿಂದ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಅಭಿಯಾನ ಜಾಥಾ ಅಭಿಯಾನ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಜನಾರೋಗ್ಯ ಮತ್ತು ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಏಕಬಳಕೆಯ ಪ್ಲಾಸ್ಟಿಕ್​ಗೆ ಕಡಿವಾಣ ಹಾಕಲು ಎಲ್ಲರೂ ಕೈಜೋಡಿಸಬೇಕು ಎಂದು ನ್ಯಾಯಾಧೀಶ ಎಚ್.ಜೆ.ಮರಳುಸಿದ್ಧ ಹೇಳಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ಜನಾರೋಗ್ಯ ಮತ್ತು ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಏಕಬಳಕೆಯ ಪ್ಲಾಸ್ಟಿಕ್​ಗೆ ಕಡಿವಾಣ ಹಾಕಲು ಎಲ್ಲರೂ ಕೈಜೋಡಿಸಬೇಕು ಎಂದು ನ್ಯಾಯಾಧೀಶ ಎಚ್.ಜೆ.ಮರಳುಸಿದ್ಧ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸುರಪುರ ವತಿಯಿಂದ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಅಭಿಯಾನ ಜಾಥಾ ಅಭಿಯಾನ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರಕ್ಕೆ ಸೇರುವ ಪ್ಲಾಸ್ಟಿಕ್ 100 ವರ್ಷಗಳಿಗೂ ಹೆಚ್ಚು ಕಾಲ ನಾಶವಾಗುವುದಿಲ್ಲ. ಇದು ಪರಿಸರ ಹಾಗೂ ಮಾನವನ ಆರೋಗ್ಯಕ್ಕೆ ಗಂಭೀರ ಹಾನಿ ಉಂಟು ಮಾಡುತ್ತದೆ. ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಸಂಪೂರ್ಣ ವಾಗಿ ಸಹಕಾರ ನೀಡಬೇಕು. ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಅಥವಾ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ ವ್ಯಾಪಾರ ಪರವಾನಗಿಯನ್ನು ರದ್ದುಪಡಿಸಿ ದಂಡ ವಿಧಿಸಲಾಗುವುದು’ ಎಂದು ಹೇಳಿದರು.

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವ ಮೂಲಕ ಪರಿಸರ ಹಾಗೂ ಮುಂದಿನ ಪೀಳಿಗೆಯನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ತ್ಯಾಜ್ಯದಿಂದ ಭೂಮಿ, ಜಲಮೂಲಗಳು ಹಾಗೂ ಜಾನುವಾರುಗಳ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಆದ್ದರಿಂದ ಬಟ್ಟೆಯ ಚೀಲ ಸೇರಿದಂತೆ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಜಾಥಾದಲ್ಲಿ ಭಾಗವಹಿಸಿದ್ದ ನ್ಯಾಯಾಂಗ ಅಧಿಕಾರಿಗಳು, ವಕೀಲರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.

ಬಸವೇಶ್ವರ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮಹಾಂತಸ್ವಾಮಿ ವೃತ್ತದವರೆಗೆ ನಡೆದ ಜಾಥಾದಲ್ಲಿ ಪರಿಸರ ಸಂರಕ್ಷಣೆಯ ಕುರಿತ ಘೋಷಣೆ ಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಮರಿಯಪ್ಪ, ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಧೀಶ ಯಮನಪ್ಪ ಬಮ್ಮಾಣಗಿ, ತಾಲೂಕು ಹಿರಿಯ ಸಿವಿಲ್ ನ್ಯಾಯಾಧೀಶ ಫಕೀರವ್ವ ಕೆಳಗೇರಿ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಅನಸೂರ, ಕಾಸೇಸ ಕಾರ್ಯದರ್ಶಿ ಬಲಭೀಮ ನಾಯಕ , ದೇವೇಂದ್ರಪ್ಪ ಬೇವಿನಕಟ್ಟಿ, ಸಂತೋಷ್ ಗಾರಂಪಳ್ಳಿ, ಹನುಮಂತರಾಯ ಕಟ್ಟಿಮನಿ, ಯಲಪ್ಪ ಹುಲಿಕಲ್, ಬಸವರಾಜ್ ಕಟ್ಟಿಮನಿ ಕಾಮನಟಗಿ ಸೇರಿದಂತೆ ಅನೇಕ ವಕೀಲರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡದಾಳವಟ್ಟದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ
ಸಮಾಜಕ್ಕೆ ಉಪಯುಕ್ತ ವ್ಯಕ್ತಿಯಾಗುವುದು ಮುಖ್ಯ: ಸಂಸದ