ಪೋಕ್ಸೊ ಕಾಯ್ದೆ ಜಾಗೃತಿ ಮಕ್ಕಳಿಗೆ ಅತ್ಯಗತ್ಯ

KannadaprabhaNewsNetwork | Published : Dec 25, 2024 12:46 AM

ಸಾರಾಂಶ

ಪೋಕ್ಸೊ ಕಾಯ್ದೆಗಳ ಕುರಿತು ಹಲವಾರು ಕಾರ್ಯಕ್ರಮಗಳನ್ನು ಮತ್ತು ಕಾರ್ಯಾಗಾರವನ್ನು ಆಯೋಜಿಸಿ ಅಧಿಕಾರಿಗಳು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಮತಿ ಎಸ್. ಮಂಜು ಅವರು ಹೇಳಿದರು.

ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಮಂಜು

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪೋಕ್ಸೊ ಕಾಯ್ದೆಗಳ ಕುರಿತು ಹಲವಾರು ಕಾರ್ಯಕ್ರಮಗಳನ್ನು ಮತ್ತು ಕಾರ್ಯಾಗಾರವನ್ನು ಆಯೋಜಿಸಿ ಅಧಿಕಾರಿಗಳು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಮತಿ ಎಸ್. ಮಂಜು ಅವರು ಹೇಳಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಪಂಚಾಯಿತಿಯ ಡಾ. ಬಿ. ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ, ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಜೀವನ ಅತಂತ್ರವಾಗುತ್ತಿದೆ. ಇದರಿಂದ ಹೊರತಂದು ಅರಿವು ಮೂಡಿಸಿ ಮಕ್ಕಳನ್ನು ಜಾಗೃತರಾಗಿರುವಂತೆ ಮಾಡುವುದು ನಮ್ಮ ಕರ್ತವ್ಯ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಒಂದೊಂದು ಕಾಯ್ದೆಗಳ ಕುರಿತು ಕಾರ್ಯನಿರ್ವಹಿಸುವುದರಿಂದ ಎಲ್ಲಾ ಕೆಲಸಗಳು ಸುಲಲಿತವಾಗುತ್ತವೆ ಎಂದರು.

ಪ್ರತಿ ಗ್ರಾಮಗಳಲ್ಲೂ ಗ್ರಾಮ ಸಭೆಯನ್ನು ನಡೆಸಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಬೇಕು. ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದ ಅವರು, ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬಂಧ ಪಟ್ಟ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಪ್ರತಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷಿತ ಸಮಿತಿ ರಚಿಸಬೇಕು. ನಿಲಯ ಗ್ರಂಥಾಲಯಗಳಲ್ಲಿ ಎಲ್ಲಾ ಕಾಯ್ದೆ ಕಾನೂನುಗಳ ಪುಸ್ತಕಗಳನ್ನು ಸಂಗ್ರಹಿಸಿ ಮಕ್ಕಳ ಕಲಿಕೆಗೆ ಸಹಕರಿಸಬೇಕು. ಮಕ್ಕಳಿಗೆ ಅತಿಥ್ಯದ ಜೊತೆಗೆ ಆರೋಗ್ಯ ತಪಾಸಣೆ ಮಾಡಲು ನಿಲಯದಲ್ಲಿ ಪೂರ್ಣ ಅವಧಿಯ ನರ್ಸ್‌ನ್ನು ನೇಮಿಸಬೇಕು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಕಡ್ಡಾಯವಾಗಿ ಆಪ್ತ ಸಮಾಲೋಚಕರನ್ನು ನೇಮಿಸಬೇಕು ಎಂದರು.

ಪ್ರತಿಯೊಂದು ಶಾಲೆಗಳಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಅವರೊಂದಿಗೆ ಸಂವಾದ ನಡೆಸಿ ಅವರಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಅವರಿಗೆ ಆತ್ಮಸ್ಥೈರ್ಯ ತುಂಬಬೇಕು. ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಿ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಚ್ಚು ಮಕ್ಕಳು ದಾಖಲಾಗುವಂತೆ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ. ಲೋಕೇಶ್ವರಪ್ಪ ಅವರು ಜಿಲ್ಲಾ ಮಕ್ಕಳ ಸುರಕ್ಷಿತ ಸಮಿತಿ ಕುರಿತು ಮಾಹಿತಿ ನೀಡಿ, ಜಿಲ್ಲೆಯಲ್ಲಿನ ಯಾವುದಾದರೂ ಮಕ್ಕಳು ಸಮಸ್ಯೆಗಳಿಗೆ ಸಿಲುಕ್ಕಿದ್ದಲ್ಲಿ ಅಥವಾ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳ ನೀಡುತ್ತಿದ್ದಲ್ಲ್ಲಿ ತಕ್ಷಣ ಜಿಲ್ಲಾ ಮಕ್ಕಳ ಸುರಕ್ಷಣಾ ಕಾಯ್ದೆ ಟೋಲ್ ಫ್ರೀ ಸಂಖ್ಯೆ 1098 ಅನ್ನು ಸಂಪರ್ಕಿಸಿ ದೂರು ನೀಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಎಚ್‌.ಸಿ. ಭಾಗೀರಥಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್‌.ಡಿ. ರೇವಣ್ಣ, ನಟರಾಜ್‌ ಉಪಸ್ಥಿತರಿದ್ದರು.

Share this article