ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪುತ್ತೂರು: ಕಳೆದ ೭ ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪುತ್ತೂರು ತಾಲೂಕಿನ ಮೈಂದನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಪರಾಧಿ, ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ದಿಂಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ. ೨೦೦೭ರ ಆಗಸ್ಟ್‌ನಲ್ಲಿ ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಆಕೆಯ ಮೊಬೈಲ್ ಚಾರ್ಜ್ ಮಾಡಲು ತನ್ನ ಬಾಡಿಗೆ ಮನೆಗೆ ಆಗಮಿಸುವಂತೆ ಪುಸಲಾಯಿಸಿ ಅತ್ಯಾಚಾರ ಎಸಗಿರುವುದು ಮತ್ತು ಬಳಿಕದ ದಿನಗಳಲ್ಲಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಎಂದು ಆರೋಪಿಸಲಾಗಿತ್ತು. ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಒಟ್ಟು ೧೮ ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ನ್ಯಾಯಾಧೀಶೆ ಸರಿತಾ ಡಿ. ಅವರು ಅಫರಾಧಿಗೆ ಭಾ.ದಂ.ಸ. ಕಲಂ ೩೭೬ ರಡಿ ಅಪರಾಧಕ್ಕೆ ೧೦ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರು. ೨೦ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ ೧ ವರ್ಷ ಸಾದಾ ಶಿಕ್ಷೆ ಮತ್ತು ಭಾ.ದಂ.ಸ. ಕಲಂ ೫೦೬ ರಡಿ ಅಪರಾಧಕ್ಕೆ ೨ ವರ್ಷಗಳ ಸಾದಾ ಶಿಕ್ಷೆ ಮತ್ತು ರು. ೫ಸಾವಿರ ದಂಡ, ದಂಡ ತೆರಲು ತಪ್ಪಿದಲ್ಲಿ ೩ ತಿಂಗಳ ಸಾದಾ ಶಿಕ್ಷೆ ಮತ್ತು ಪೋಕೋ ಕಾಯ್ದೆಯಡಿ ಅಪರಾಧಕ್ಕೆ ೧೦ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರು. ೧೦ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ ೧ ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿರುತ್ತಾರೆ. ದಂಡ ಪ್ರಕ್ರಿಯಾ ಸಂಹಿತೆ ಕಲಂ ೩೫೭ಎ ಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ ರು. ೬ಲಕ್ಷ ಪರಿಹಾರ ರೂಪವಾಗಿ ನೀಡಬೇಕೆಂದು ಆದೇಶಿಸಿದೆ. ಸರ್ಕಾರದ ಪರ ಪೋಕೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.