ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಲೂಕು ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದು, ದುರಂತದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ.ಪರಮೇಶ್ವರ ರಾಜೀನಾಮೆ ನೀಡಬೇಕು ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಮುಖಂಡ ಡಾ.ಸದಾನಂದ್ ಮಾತನಾಡಿ, ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ ಎಂದು ದೂರಿದರು.ಸರ್ಕಾರ ನಡೆಸುವವರು ಪಾರದರ್ಶಕ, ಸತ್ಯ ಮತ್ತು ನಿಷ್ಠಾವಂತ ಆಡಳಿತವನ್ನು ನೀಡುವುದಾಗಿ ಹೇಳಿಕೊಳ್ಳುತ್ತಾರೆ. ಇವರು ತೆಗೆದುಕೊಂಡ ನಿರ್ಧಾರಗಳಿಂದಾಗಿ 11 ಸಾವುಗಳು ಸಂಭವಿಸಿವೆ. ತರಾತುರಿಯಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಹೇಗೆ ಸಾಧ್ಯ. ಇದನ್ನು ಸರ್ಕಾರ ಯೋಚಿಸಬೇಕಿತ್ತು ಎಂದರು.
ಪ್ರತಿಭಟನೆಯಲ್ಲಿ ಸಂತೋಷ್ , ಸಿದ್ದಲಿಂಗಸ್ವಾಮಿ, ಪ್ರದೀಪ್, ಶಿವನಂಜೇಗೌಡ, ವೆಂಕಟೇಶ್, ದೀಪು ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗರಾಜು ನೇತೃತ್ವದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ದಕ್ಷ ಪೊಲೀಸರ ತಲೆ ದಂಡ ಮಾಡಿದೆ. ಇದು ಖಂಡನೀಯ. ಸರ್ಕಾರ ಘಟನೆಯ ಸಂಪೂರ್ಣ ಜವಾಬ್ದಾರಿ ಹೊರಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.