ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಅವ್ಯವಸ್ಥೆ ಖಂಡಿಸಿ ಎಬಿವಿಪಿ ಪ್ರತಿಭಟನೆ

KannadaprabhaNewsNetwork |  
Published : Aug 05, 2026, 04:15 AM IST
ವಿಜಯಪುರದ ತಿಕೋಟಾ ತಾಲೂಕಿನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅವ್ಯವಸ್ಥೆ ಹಾಗೂ ಸಕಾಲಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸದ ಪ್ರಕರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಹಾಗೂ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ವಿತರಿಸದಿರುವ ಪ್ರಕರಣವನ್ನು ಖಂಡಿಸಿ ಎಬಿವಿಪಿ ಹಾವೇರಿ ಶಹರ ಘಟಕದ ಕಾರ್ಯಕರ್ತರು ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿ: ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಸ್ಥೆ ಹಾಗೂ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ವಿತರಿಸದಿರುವ ಪ್ರಕರಣವನ್ನು ಖಂಡಿಸಿ ಎಬಿವಿಪಿ ಹಾವೇರಿ ಶಹರ ಘಟಕದ ಕಾರ್ಯಕರ್ತರು ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಬಿವಿಪಿ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿ ಕಾರ್ಯಕರ್ತರು ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ, ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಲೋಪಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಈ ವೇಳೆ ಎಬಿವಿಪಿ ಧಾರವಾಡ ವಿಭಾಗ ಸಂಚಾಲಕ ಅಭಿಷೇಕ ದೊಡ್ಡಮನಿ ಮಾತನಾಡಿ, ಆ.2ರಂದು ತಿಕೋಟಾ ತಾಲೂಕಿನಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಡವಾಗಿ ವಿತರಿಸಿರುವುದರಿಂದ ಅನೇಕ ಪರೀಕ್ಷಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿ ಪರೀಕ್ಷೆಯನ್ನು ಸಮರ್ಪಕವಾಗಿ ಬರೆಯಲು ಸಾಧ್ಯವಾಗಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯದಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂಪೂರ್ಣ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ನಡೆಯಲಿರುವ ಎಲ್ಲಾ ಸ್ಪರ್ಧಾತ್ಮಕ ಹಾಗೂ ನೇಮಕಾತಿ ಪರೀಕ್ಷೆಗಳು ಪಾರದರ್ಶಕ, ವ್ಯವಸ್ಥಿತ ಮತ್ತು ನ್ಯಾಯಸಮ್ಮತವಾಗಿ ನಡೆಯುವಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ವ್ಯವಸ್ಥೆಯ ಮೇಲಿನ ಅಭ್ಯರ್ಥಿಗಳ ವಿಶ್ವಾಸ ಉಳಿಯುವಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ಸಾಗರ ಪೊಲೀಸ್‌ಗೌಡ್ರ ಮಾತನಾಡಿ, ಪೊಲೀಸ್ ನೇಮಕಾತಿಯಂತಹ ಮಹತ್ವದ ಪರೀಕ್ಷೆಗಳಲ್ಲಿ ಉಂಟಾಗಿರುವ ಇಂತಹ ಲೋಪಗಳು ಯುವಕರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರಾದ ಯಶವಂತ ಬಿ., ಕಾರ್ತಿಕ ಕೆ., ಪ್ರಭಾವತಿ ಧರ್ಮಣ್ಣನವರ, ಲಾವಣ್ಯ ಹಾವಕ್ಕನವರ, ಸಾನ್ವಿ ಕೊಳ್ಳಿ ಸೇರಿದಂತೆ ಎಬಿವಿಪಿ ವಿದ್ಯಾರ್ಥಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್‌ ಫೋರೆನ್ಸಿಕ್‌ ವ್ಯಾನ್‌ ಕಾರ್ಯಾರಂಭ
ಕಾಂಗ್ರೆಸ್‌ ಸರ್ಕಾರದ ಆಡಳಿತ ವಿಫಲ