ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ : ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಕಚೇರಿಗೆ ನುಗ್ಗುತ್ತೇವೆ ಎಂಬ ಪ್ರಚೋದನಕಾರಿ, ದೇಶ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಪೊಲೀಸ್ ಇಲಾಖೆ ಯಾವುದೇ ಪ್ರಕರಣವನ್ನು ದಾಖಲಿಸದೇ ಇರುವುದು ಓಲೈಕೆ ರಾಜಕಾರಣದ ಪರಮಾವಧಿಯಾಗಿದೆ.
ಜಿಲ್ಲೆಯ ಶಿಕ್ಷಕರಿಗಾದ ಅನ್ಯಾಯವನ್ನು ವಿರೋಧಿಸಿ ನ್ಯಾಯಯುತ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿರುವುದು ಹಿಟ್ಲರ್ ಮಾದರಿಯ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ತಿಳಿಸಿದ್ದಾರೆ.ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಿರುವ ಕಾಂಗ್ರೆಸ್ ನಾಯಕರು ಸಂವಿಧಾನ ದತ್ತವಾದ ಹುದ್ದೆಯಲ್ಲಿರುವ ರಾಜ್ಯಪಾಲರು ಹಾಗೂ ದೇಶದ ಪ್ರಧಾನಿಯವರಿಗೆ ತುಚ್ಚ ಹೇಳಿಕೆಗಳ ಮೂಲಕ ಅವಮಾನಿಸಿರುವುದು ಸಂವಿಧಾನಕ್ಕೆ ಗೈದ ಅಪಚಾರವಲ್ಲವೇ? ಹಗರಣಗಳ ಕೂಪದಲ್ಲಿ ಸಿಲುಕಿರುವ ರಾಜ್ಯ ಸರ್ಕಾರ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಬಿಜೆಪಿ ವಿರುದ್ಧ ಇಂತಹ ಷಡ್ಯಂತ್ರಗಳಲ್ಲಿ ತೊಡಗಿರುವುದು ಖಂಡನೀಯ.
ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಬೇಲ್ ಪಡೆದು ತಿರುಗಾಡುತ್ತಿರುವ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿ ದೇಶಭಕ್ತ ಸಮಾಜ ಸೇವಾ ಸಂಘಟನೆ ಆರ್.ಎಸ್.ಎಸ್. ಮತ್ತು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ ಬಿಜೆಪಿಯನ್ನು ಮೂದಲಿಸುವ ಜೊತೆಗೆ ಶತ್ರು ರಾಷ್ಟ್ರವನ್ನು ಹೊಗಳುತ್ತಾ ಭಾರತವನ್ನು ತೆಗಳುವ ಕೀಳು ಮಟ್ಟಕ್ಕೆ ಇಳಿದಿರುವುದು ದೇಶದ ಬಗ್ಗೆ ಕಾಂಗ್ರೆಸಿಗರಿಗೆ ಇರುವ ಕೀಳರಿಮೆಯನ್ನು ಸಾಬೀತುಪಡಿಸಿದೆ ಎಂದು ಅವರು ತಿಳಿಸಿದ್ದಾರೆ.ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ಖ್ಯಾತಿಗೆ ಮಸಿ ಬಳಿಯುವ ದುರುದ್ದೇಶದಿಂದ ಹಿಜಾಬ್ ಪ್ರಕರಣದ ನೆಪವನ್ನು ಮುಂದಿಟ್ಟುಕೊಂಡು, ಕುಂದಾಪುರದ ಪ್ರಾಂಶುಪಾಲರಿಗೆ ಘೋಷಣೆಯಾಗಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದಿರುವ ಸರ್ಕಾರ ಆಗಿರುವ ಪ್ರಮಾದವನ್ನು ತಕ್ಷಣ ಸರಿಪಡಿಸಬೇಕು. ಅನ್ಯಾಯದ ವಿರುದ್ಧ ಬಿಜೆಪಿಯ ಜನ ಪರ ಹೋರಾಟ ಎಂದಿಗೂ ನಿಲ್ಲದು. ಜನತೆ ಕಾಂಗ್ರೆಸ್ಸಿನ ಜನವಿರೋಧಿ ನೀತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಶಿಕ್ಷಕ ವಿರೋಧಿ ಕಾಂಗ್ರೆಸ್ಸಿಗೆ ಸೂಕ್ತ ಸಮಯದಲ್ಲಿ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.