ಕುಷ್ಟಗಿ: ಪೋಲಿಯೋವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಂತ ಅಗತ್ಯವಾಗಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಜಾಗೃತಿ ವಹಿಸಬೇಕು ಎಂದು ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎನ್.ಆರ್.ಪವಾರ್ ಹೇಳಿದರು.
ಪೋಲಿಯೋ ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಸಾಧ್ಯತೆ ಇದೆ. ಆದರೆ ನಿಯಮಿತವಾಗಿ ಪೋಲಿಯೋ ಲಸಿಕೆ ನೀಡುವುದರಿಂದ ಈ ರೋಗ ಸಂಪೂರ್ಣವಾಗಿ ತಡೆಗಟ್ಟಬಹುದು. ದೇಶವು ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆ ಉಳಿಸಿಕೊಳ್ಳಲು ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪ್ರತಿಯೊಂದು ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಪೋಷಕರು ಯಾವುದೇ ತಪ್ಪು ಕಲ್ಪನೆಗಳಿಗೆ ಒಳಗಾಗದೆ ತಮ್ಮ ಮಕ್ಕಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಂದು ಸುತ್ತಿನಲ್ಲೂ ಪೋಲಿಯೋ ಹನಿ ಹಾಕಿಸಬೇಕು. ಒಂದು ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂಬುದು ಆರೋಗ್ಯ ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.ವಿಪಿಕೆ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಕಂಟ್ಲಿ, ಮಕ್ಕಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬ ಪೋಷಕರ ಮೊದಲ ಆದ್ಯತೆಯಾಗಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ತೆರಳಿ ಹಾಗೂ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಪೋಲಿಯೋ ಹನಿ ನೀಡುತ್ತಿದ್ದಾರೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ಈ ಅಭಿಯಾನದಲ್ಲಿ ಆರೋಗ್ಯ ಮೇಲ್ವಿಚಾರಕ ರವೀಂದ್ರ ನಂದಿಹಾಳ, ಬಸವರಾಜ ಚೋಕಾವಿ, ಮಾಜಿ ಗ್ರಾಪಂ ಸದಸ್ಯ ರಾಜೇಸಾಬ ಯಲಬುರ್ಗಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.