ಗದಗ: ಪೋಲಿಯೋ ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಯಶಸ್ವಿಗೊಳಿಸಲು 5 ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ದೇಶದಲ್ಲಿ ಪೋಲಿಯೋ ನಿರ್ಮೂಲನೆ ಸಾಧನೆಯಾಗಿದ್ದರೂ, ಈ ಸಾಧನೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಪ್ರತಿಯೊಂದು ಲಸಿಕಾ ಸುತ್ತಿನಲ್ಲೂ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ. ಸರ್ಕಾರವು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಉಚಿತವಾಗಿ ಪೋಲಿಯೊ ಲಸಿಕೆಯನ್ನು ನೀಡುತ್ತಿದೆ ಎಂದರು.
5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ, ಮನೆಗೆ ತೆರಳಿ ಹಾಗೂ ವಿವಿಧ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದಾರೆ.ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಾರ್ವಜನಿಕರು ಸಹ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವಕುಮಾರ ಮಾನಕರ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.