ಚಿತ್ರದುರ್ಗ: ಡಿಸೆಂಬರ್ 21 ರಿಂದ 24 ರವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ 1,26,361 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದ 98,279 ಹಾಗೂ ನಗರ ಪ್ರದೇಶದ 28,082 ಮಕ್ಕಳು ಸೇರಿದಂತೆ ಒಟ್ಟು 1,26,361 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರ ವಹಿಸಿ, ವ್ಯವಸ್ಥಿತವಾಗಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು. ಆರೋಗ್ಯ ಇಲಾಖೆ ಜತೆಗೆ ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜವಾಬ್ದಾರಿಯುತವಾಗಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಪೋಲಿಯೋದಿಂದ ಉಂಟಾಗುವ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಎಲ್ಲ ಅರ್ಹ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಾಕೀತು ಮಾಡಿದರು. ತಹಸೀಲ್ದಾರ್ ನೇತೃತ್ವದಲ್ಲಿ ತಾಲೂಕು ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಚಾಲನಾ ಮಟ್ಟದ ಸಭೆಗಳನ್ನು ನಡೆಸಿ, ಹೈರಿಸ್ಕ್ ಪ್ರದೇಶಗಳಲ್ಲಿ ವ್ಯವಸ್ಥಿತವಾಗಿ ಪಲ್ಸ್ ಪೋಲಿಯೋ ಬೂತ್ ಕಾರ್ಯಕ್ರಮ ಮಾಡಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕಾಗಿ 1091 ಲಸಿಕಾ ಕೇಂದ್ರಗಳು, 63 ಟ್ರಾನ್ಸಿಟ್ ಪಾಯಿಂಟ್ ಮತ್ತು 15 ಮೊಬೈಲ್ ತಂಡಗಳ ಮೂಲಕ ಪೋಲಿಯೋ ಲಸಿಕೆ ಹಾಕಲು ಸಿದ್ಧತೆ ಕೈಗೊಳ್ಳಲಾಗಿದೆ. ಈ ಸಂಬಂಧ 2338 ಲಸಿಕಾ ಕಾರ್ಯಕರ್ತರು, 239 ಮೇಲ್ವಿಚಾರಕನ್ನು ನಿಯೋಜಿಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.