ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾ.3ರಿಂದ 6ರವರೆಗೆ ನಡೆಯಲಿದ್ದು, ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಂದ ಪ್ರಭಾತಫೇರಿ ನಡೆಸಬೇಕು. ನಗರ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿಯಲ್ಲಿಯೂ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, 0-5 ವರ್ಷದೊಳಗಿನ ನಗರ ಪ್ರದೇಶದ 31829 ಮಕ್ಕಳು, ಗ್ರಾಮೀಣ ಪ್ರದೇಶದ 103276 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,35,105 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಲಸಿಕಾ ಕಾರ್ಯಕ್ರಮಕ್ಕಾಗಿ 1084 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ, 2,291 ಲಸಿಕಾ ಕಾರ್ಯಕರ್ತರು, 259 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಮಾ.3ರಂದು ಲಸಿಕಾ ಕೇಂದ್ರಗಳಲ್ಲಿಯೇ ಶೇ.95ರಷ್ಟು ಪೋಲಿಯೋ ಲಸಿಕೆ ಹಾಕಲಾಗುವುದು. ನಂತರದ ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡುವುದರ ಮೂಲಕ ಲಸಿಕೆ ಹಾಕಲಾಗುವುದು ಎಂದರು.ಬೇಸಿಗೆಯಲ್ಲಿ ಬಿಸಿಲು ಹೆಚ್ಚಳದಿಂದಾಗಿ ಲಸಿಕೆ ಹಾಳಾಗುವ ಸಾಧ್ಯತೆ ಇರುವುದರಿಂದ ತಾಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಗಮನಹರಿಸಿ, ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ವಿಶ್ವ ಆರೋಗ್ಯ ಸಂಸ್ಥೆಯ ಶ್ರೀಧರ್ ಮಾತನಾಡಿ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನದಲ್ಲಿ ಕಳೆದ ವರ್ಷ 11 ಮಕ್ಕಳು ಪೋಲಿಯೋಗೆ ತುತ್ತಾಗಿದ್ದಾರೆ. ಹಾಗಾಗಿ ನಾವು ಪೋಲಿಯೋ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ನಮ್ಮ ರಾಜ್ಯದಲ್ಲಿ 2007 ರ ನಂತರ ಇಲ್ಲಿಯವರೆಗೂ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲ ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.