ಶಿರಸಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಗೃಹ ಸಚಿವಾಲಯವನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿ ವಿಷಯವನ್ನು ಕಡೆಗಣಿಸಿ, ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪ್ರಕರಣ ದಾಖಲಿಸಿ, ಅವರ ಆತ್ಮಸ್ಥೈರ್ಯ ಕುಸಿಯುವಂತೆ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಹಾಗೂ ಇನ್ನೂ ಅನೇಕ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅನಂತಮೂರ್ತಿ ಹೆಗಡೆ ಅವರು ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಯ ವಿಷಯಕ್ಕೆ ಸಂಬಧಿಸಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಸಿದ್ಧವಾದ ರೂಪುರೇಷೆಯಂತೆ ಕಾಮಗಾರಿ ಕೈಗೊಳ್ಳಬೇಕು. ಆಸ್ಪತ್ರೆಯ ಅಭಿವೃದ್ಧಿ ವಿಷಯದಲ್ಲಿ ಶಾಸಕರು ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಅನಂತಮೂರ್ತಿ ಉಪವಾಸ ಸೇರಿದಂತೆ ಅನೇಕ ಹೋರಾಟ ಮಾಡಿ ವಸ್ತುಸ್ಥಿತಿಯನ್ನು ಜನರ ಮುಂದೆ ಇಟ್ಟಿದ್ದಾರೆ. ವಿರೋಧ ಪಕ್ಷದ ಕಾರ್ಯಕರ್ತನಾಗಿ ಅವರ ಕೆಲಸ ಮಾಡಿದ್ದಾರೆ. ೨೨೪ ಶಾಸಕರು ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.
ಶಾಸಕರು ಪ್ರಶ್ನಾತೀತರೆ? ಚುನಾವಣೆ ಸಮೀಪಿಸುತ್ತಿರುವಾಗ ಕಾಂಗ್ರೆಸ್‌ಗೆ ಸಂವಿಧಾನ ನೆನಪಾಗುತ್ತದೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಾಗಿದೆ. ಅಭಿವೃದ್ಧಿ ವಿಷಯದಲ್ಲಿ ಟೀಕೆ ಮಾಡಿದರೂ ಪ್ರಕರಣ ದಾಖಲಿಸುತ್ತಾರೆ. ಇಂತಹ ಸಂಸ್ಕೃತಿಯನ್ನು ಕಾಂಗ್ರೆಸ್ ಕೈಬಿಡಬೇಕು ಎಂದರು.ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರವು ಟೀಕೆ ಮಾಡುವವರ ಮೇಲೆ ಗೃಹ ಇಲಾಖೆ ಬಳಸಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಸಿಲುಕಿಸಿ ಅವರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಗ್ರಾಮೀಣ ಮಂಡಲಾಧ್ಯಕ್ಷೆ ಉಷಾ ಹೆಗಡೆ, ನಗರ ಮಂಡಲ ಕಾರ್ಯದರ್ಶಿ ನಾಗರಾಜ ನಾಯ್ಕ, ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅಧ್ಯಕ್ಷ ಕುಮಾರ ಬೋರ್ಕರ್ ಮತ್ತಿತರರು ಇದ್ದರು.