ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಇಂದು

KannadaprabhaNewsNetwork |  
Published : Nov 04, 2025, 12:30 AM IST
5656465 | Kannada Prabha

ಸಾರಾಂಶ

ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮ ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹುಬ್ಬಳ್ಳಿ:

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡಲು ಕಂಕಣಬದ್ಧರಾಗಿರುವ "ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ "ಗೆ 50 ವರ್ಷ ತುಂಬಿದ ಪ್ರಯುಕ್ತ ನ. 4ರಂದು ನಗರದಲ್ಲಿ ಧಾರವಾಡ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳ ಆಶ್ರಯದಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ 1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವುದು ಸುವರ್ಣ ಮಹೋತ್ಸವದ ಗುರಿ.

ಮಂಡಳಿಗಳ ಸ್ಥಾಪನೆ ಜತೆಗೆ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇಂದಿರಾಗಾಂಧಿ ಅವರ ಹೆಗ್ಗಳಿಕೆ. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಪ್ರಾಣಿ-ಪಕ್ಷಿಗಳ ರಕ್ಷಣೆಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆ - 1972, ಹುಲಿ ಮತ್ತು ಅವುಗಳ ಆವಾಸ ಸ್ಥಾನ ರಕ್ಷಣೆಗೆ 1973ರಲ್ಲಿ ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆ, 1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆ ಪಾಠ ಮಾಡಿದರು. ಹಾಗಾಗಿ ಸುವರ್ಣ ಮಹೋತ್ಸವದ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಇಂದಿರಾ ಗಾಂಧಿ ಅವರ ಕೊಡುಗೆ ಸ್ಮರಿಸಿಕೊಳ್ಳಲಾಗುತ್ತದೆ. ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮ ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆ ಆಯೋಜಿಸಲಾಗುತ್ತಿದೆ. ವಿಧಾನಸಭಾ ಕ್ಷೇತ್ರವಾರು ನಡೆಯುತ್ತಿರುವ ಸ್ಪರ್ಧೆಯ ವಿಜೇತರಿಗೆ ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ₹ 3 ಸಾವಿರ ಬಹುಮಾನ ನೀಡಲಾಗುವುದು. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವುದರಲ್ಲಿ ಯುವಕರ ಪಾತ್ರ ಬಹಳ ಮಹತ್ವದ್ದು ಎಂದು ಪರಿಗಣಿಸಿ ‘ಪರಿಸರದ ಬಗ್ಗೆ ರಿಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ.

ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ, ಸಂರಕ್ಷಣೆಯ ಸಂದೇಶ ಸಾರುವ ಉತ್ತಮ ರಿಲ್ಸ್‌ಗೆ ₹ 50 ಸಾವಿರ ಪ್ರಥಮ, ₹ 25 ಸಾವಿರ ದ್ವಿತೀಯ ಹಾಗೂ ₹ 10 ಸಾವಿರ ತೃತೀಯ ಬಹುಮಾನ ನೀಡಲಾಗುವುದು.

ಜಿಲ್ಲಾಮಟ್ಟದಲ್ಲಿ ಪರಿಸರ ಉಳಿವಿಗಾಗಿ ಹಾಗೂ ಮಾಲಿನ್ಯ ನಿಯಂತ್ರಣಕ್ಕಾಗಿ ಎಲೆಮರೆಯ ಕಾಯಿಗಳಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುವುದು. ಜಿಲ್ಲಾಮಟ್ಟದಲ್ಲಿ ಮಾಲಿನ್ಯ ನಿಯಂತ್ರಣದ ಬಗ್ಗೆ ಚರ್ಚೆಯಾದ ಬಳಿಕ ರಾಜ್ಯಮಟ್ಟದಲ್ಲಿ ನ. 18 ಮತ್ತು 19ರಂದು ಸುವರ್ಣ ಸಮಾರೋಪ ಸಮಾರಂಭ ನಡೆಯಲಿದೆ.ಜೋಶಿ-ಹೊರಟ್ಟಿ ಭಾಗಿ

ನ. 4ರಂದು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತಿರಿರುವರು. ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಸಚಿವರಾದ ಈಶ್ವರ ಖಂಡ್ರೆ, ಎಚ್.ಕೆ. ಪಾಟೀಲ, ಮಂಕಾಳ ಎಸ್. ವೈದ್ಯ, ಸಂಸದ ಬಸವರಾಜ ಬೊಮ್ಮಾಯಿ, ಸಲೀಂ ಅಹ್ಮದ್ ಗೌರವ ಉಪಸ್ಥಿತಿ ವಹಿಸುವರು. ಶಾಸಕ ಆರ್.ವಿ. ದೇಶಪಾಂಡೆ ಸೇರಿದಂತೆ ವಿವಿಧ ನಿಗಮಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ