ಬಡವರು ಶಿಕ್ಷಣದಿಂದ ವಂಚಿತರಾಗಬಾರದು: ಶಾಸಕ ಭೀಮಣ್ಣ ನಾಯ್ಕ

KannadaprabhaNewsNetwork |  
Published : Jun 03, 2025, 12:21 AM IST
ಪೊಟೋ೨ಎಸ್.ಆರ್.ಎಸ್೧ (ನಗರದ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯಗಳನ್ನು ಶಾಸಕ ಭೀಮಣ್ಣ ನಾಯ್ಕ ವಿತರಿಸಿದರು.) | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಬೇಧ-ಭಾವ ಇರಬಾರದೆಂದು ಮಧ್ಯಾಹ್ನ ಬಿಸಿಯೂಟ, ಸಮವಸ್ತ್ರ, ಪೌಷ್ಠಿಕಾಂಶ ನೀಡಲಾಗುತ್ತಿದೆ.

ಶಿರಸಿ: ಬಡವರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಅವರು ಸೋಮವಾರ ನಗರದ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಶಾಲಾ ಪ್ರಾರಂಭೋತ್ಸವದಲ್ಲಿ ಪಠ್ಯಗಳನ್ನು ವಿತರಿಸಿ, ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿಕ್ಷಣದಲ್ಲಿ ಹಲವು ರೀತಿಯ ಬದಲಾವಣೆ ತಂದು ಮೂಲಭೂತ ಸೌಕರ್ಯ ನೀಡಿ, ಅತ್ಯುತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಬೇಧ-ಭಾವ ಇರಬಾರದೆಂದು ಮಧ್ಯಾಹ್ನ ಬಿಸಿಯೂಟ, ಸಮವಸ್ತ್ರ, ಪೌಷ್ಠಿಕಾಂಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಉತ್ತಮ ಸಂಸ್ಕಾರ ನೀಡಬೇಕು. ಶಿಕ್ಷಕರು ಉತ್ತಮ ರೀತಿಯಲ್ಲಿ ಪಾಠ ಬೋಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಸ್ಪರ್ಧೆ ನೀಡುತ್ತಿರುವುದು ಸಂತೋಷ. ಹಣ ಮುಖ್ಯವಲ್ಲ ಶಿಕ್ಷಣ ಮುಖ್ಯವಾಗಿದೆ. ಪ್ರವೇಶ ಕೇಳಿ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ ಎಂದು ಸೂಚನೆ ನೀಡಿದ್ದೇನೆ. ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಕೊಡಿಸುತ್ತೇನೆ ಎಂದರು.

ಶಿರಸಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕ ಪಿ.ಬಸವರಾಜ ಮಾತನಾಡಿ, ಸಮವಸ್ತ್ರ, ಪಠ್ಯ-ಪುಸ್ತಕ, ಪೌಷ್ಠಿಕಯುತ ಆಹಾರ ನೀಡಲಾಗುತ್ತಿದೆ. ೧೫೦ ಹಾಗೂ ೨೦೦ ವರ್ಷ ಪೂರೈಸಿದ ಶಾಲೆಗಳಿವೆ. ಆದರೆ ಶೈಕ್ಷಣಿಕ ಜಿಲ್ಲೆಯ ೫ ಸಾವಿರ ಶಾಲಾ ಕೊಠಡಿಗಳಲ್ಲಿ ಕೇವಲ ೧೩೫ ಮಾತ್ರ ಬಳಕೆಗೆ ಯೋಗ್ಯವಿಲ್ಲ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಅಸುರಕ್ಷತೆಯ ಕಟ್ಟಡಗಳಿಲ್ಲ. ಶೇ.೭೫ ರಷ್ಟು ಪಠ್ಯಪುಸ್ತಕ ಸರಬರಾಜು ಆಗಿದೆ. ಸಮವಸ್ತ್ರ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ನಮ್ಮ ಜಿಲ್ಲೆಯ ಪ್ರಾಥಮಿಕ ಶಾಲೆಗೆ ೭೨೧ ಅತಿಥಿ ಶಿಕ್ಷಕರು, ಪ್ರೌಢಶಾಲೆಗೆ ೧೨೭ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಿದ್ದೇವೆ ಎಂದ ಅವರು, ಶಿಕ್ಷಕರ ಪ್ರಯತ್ನಕ್ಕೆ ಅಭಿನಂದಿಸಬೇಕು. ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ, ಶಿರಸಿ ಶೈಕ್ಷಣಿಕ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ. ಶಿಕ್ಷಕರು ಆಂಗ್ಲ ಮಾಧ್ಯಮಕ್ಕೆ ಪ್ರಾಮುಖ್ಯತೆ ನೀಡುವ ರೀತಿಯಲ್ಲಿಯೇ ಕನ್ನಡ ಮಾಧ್ಯಮಕ್ಕೂ ನೀಡಬೇಕು ಎಂದರು.

ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜ ಶೆಟ್ಟರ್, ಸದಸ್ಯರಾದ ಶ್ರೀನಿವಾಸ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ