ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸಭೆ ನಡೆಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಲೀಲಾವತಿ ಡಿ.ನಾಯಕ್ ಕನರಾಡಿ ಮರ್ಣೆ ಹಾಗೂ ರಾಮಚಂದ್ರ ಟಿ. ಭಟ್ ಯಲ್ಲಾಪುರ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಪ್ರಸ್ತುತ ದೇಶದ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ.ˌರಾಹುಲ್ ಗಾಂಧಿಯವರು ದೇಶದ ಸಮಸ್ಯೆಗಳಿಗೆ ಸ್ಪಂದಿಸುವ ವೈಖರಿಯಿಂದ ಹೆಚ್ಚೆಚ್ಚು ಜನರು ಅವರ ಮುಖಂಡತ್ವವನ್ನು ಒಪ್ಪಿ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಜನತೆಗೆ ಪಕ್ಷದ ಮೇಲೆ ವಿಶ್ವಾಸ ಮೂಡುವಂತೆ ಮಾಡಬೇಕು ಎಂದರು.ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಮಾತನಾಡಿ, ದೇಶದೆಲ್ಲೆಡೆ ಮತಗಳ್ಳತನದ ಆತಂಕ ಉಂಟಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧಾರ ಕೈಗೊಂಡಿದೆ ಎಂದು ಹೇಳಿದರು.ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಲೀಲಾವತಿ ಡಿ.ನಾಯಕ್ ಕನರಾಡಿ ಮರ್ಣೆ ಹಾಗೂ ರಾಮಚಂದ್ರ ಟಿ. ಭಟ್ ಯಲ್ಲಾಪುರ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಪ್ರಸ್ತಾವನೆಗೈದು, ಪಕ್ಷದ ರಾಷ್ಟ್ರೀಯ ನಾಯಕ ದಿ. ಆಸ್ಕರ್ ಫರ್ನಾಂಡಿಸ್ ಅವರ 4ನೇ ಪುಣ್ಯತಿಥಿ ಆಚರಿಸುವ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು.ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಂಬಂಧಪಟ್ಟ ಇಲಾಖೆಯನ್ನು ಎಚ್ಚರಿಲು ಪ್ರತಿಭಟನೆ ಹಮ್ಮಿಕೊಳ್ಳುವುದೆಂದು ನಿರ್ಧರಿಸಲಾಯಿತು.ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೋಳ್ಕೆಬೈಲ್, ರಾಜು ಪೂಜಾರಿ, ಕಾಪು ದಿವಾಕರ್ ಶೆಟ್ಟಿ ಮುಂತಾದವರು ವೇದಿಕೆಯಲ್ಲಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ ಶೆಟ್ಟಿ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.