ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರತಿಭಾ ಕಾರಂಜಿ ಪೂರಕ

KannadaprabhaNewsNetwork | Published : Dec 2, 2023 12:45 AM

ಸಾರಾಂಶ

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕುಸಿಯುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆ ಎಂದು ಭಾವಿಸದೇ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಸೊರಬ

ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂಥ ಕಾರ್ಯಕ್ರಮಗಳು ಪೂರಕವಾಗಿವೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಪ್ರೋತ್ಸಾಹಿಸಲು ಹೆಚ್ಚಿನ ಅನುದಾನ ನೀಡಲು ಒತ್ತು ನೀಡಲಾಗುವುದು ಎಂದು ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡ ತಾಲೂಕುಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಹಿತದೃಷ್ಠಿಯಿಂದ ದೈಹಿಕ ಶಿಕ್ಷಕರು ಮಾತ್ರವಲ್ಲದೇ ಎಲ್ಲ ಶಾಲೆಗಳಿಗೆ ಶಿಕ್ಷಕರ ಭರ್ತಿ ಮಾಡಲಾಗುವುದು. ಗ್ರಾಮೀಣ ಪ್ರದೇಶದ ಶಾಲೆಗಳನ್ನು ಮೇಲ್ದರ್ಜೆಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲು ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ರಾಜ್ಯದ ಪದವಿಪೂರ್ವ ವಿಭಾಗದಲ್ಲಿ ಕೊರತೆ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ವಹಿಸುವುದಾಗಿ ತಿಳಿಸಿದರು.

ದೇಶದ ಸತ್ಪ್ರಜೆಗಳನ್ನು ರೂಪಿಸುವ ಶಿಕ್ಷಣ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಹಾಲಿನ ಜೊತೆಗೆ ರಾಗಿ ಮಾಲ್ಟ್ ನೀಡುವ ಕಾರ್ಯ ಪ್ರಗತಿಯಲ್ಲಿದೆ. ತಾಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಬೆಳಗಾವಿ ಅಧಿವೇಶನದ ತರುವಾಯ ಗ್ರಾಪಂ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿಯೇ ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕುಸಿಯುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆ ಎಂದು ಭಾವಿಸದೇ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಬಿ.ಕೆ. ಯುವರಾಜ್ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಸಿ.ಆರ್. ಪರಮೇಶ್ವರ್, ತಹಸೀಲ್ದಾರ್ ಎಚ್.ಎ. ಸರಕಾವಸ್, ತಾಪಂ ಇಒ ಡಾ. ಎನ್.ಆರ್. ಪ್ರದೀಪ್‌ಕುಮಾರ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಆರ್. ಲಿಂಗರಾಜ ಒಡೆಯರ್, ಉಪಪ್ರಾಂಶುಪಾಲ ಡಿ.ಫಕೀರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಚ್. ಮನೋಹರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ. ಹಾಲಪ್ಪ, ಶಿಕ್ಷಕರ ಸಂಘದ ಜಿ.ಆರ್. ಗಿರಿಧರ್, ಎಚ್.ಜಿ. ಗಣಪತಿ, ಇಬ್ರಾಹಿಂ ದೊಡ್ಮನಿ, ಶಶಿಕಲಾ, ಎಸ್‌ಡಿಎಂಸಿ ಸದಸ್ಯರಾದ ಪ್ರತಿಭಾ, ಜಯಶೀಲ, ಪ್ರಮುಖರಾದ ಎಚ್. ಗಣಪತಿ, ಎಂ.ಡಿ. ಶೇಖರ್, ಸದಾನಂದಗೌಡ ಬಿಳಗಲಿ, ಎಚ್.ಅಣ್ಣಪ್ಪ ಹಾಲಘಟ್ಟ, ಎಲ್.ಜಿ. ರಾಜಶೇಖರ, ಕೆ.ಪಿ. ರುದ್ರಗೌಡ, ಕೆ.ವಿ.ಗೌಡ, ರಾಜೇಂದ್ರ ನಾಯ್ಕ್ ಸೇರಿದಂತೆ ಪುರಸಭೆ ಸದಸ್ಯರು ಮತ್ತಿತರರಿದ್ದರು.

- - -

-01ಕೆಪಿಸೊರಬ02:

ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು.

Share this article