ಮಂಗಳೂರು: ದೇಶದಲ್ಲಿಯೇ ಪ್ರಜಾ ಸೇವೆಗೆ ಸಂಬಂಧಿಸಿದ ಪ್ರತ್ಯೇಕ ಇಲಾಖೆ ಕರ್ನಾಟಕದಲ್ಲಿ ಇದ್ದು, ಈ ಕಾರ್ಯಕ್ರಮ ಇತರೆ ದೇಶಗಳಿಗೂ ಮಾದರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.ಅವರು ಶನಿವಾರ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು. ಜನರ ಮಧ್ಯೆಯೇ ಆಡಳಿತ ಮತ್ತು ಸರ್ಕಾರ ಇರಬೇಕು ಹಾಗೂ ಎಲ್ಲ ಇಲಾಖೆಗಳ ಸೇವೆಗಳನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯಬೇಕು ಎಂಬ ಆಶಯದೊಂದಿಗೆ ಪ್ರಜಾ ಸೇವಾ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ರಾಜ್ಯಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಾದ ವಿಷಯಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಅವುಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, ಸಾರ್ವಜನಿಕರು ತಮ್ಮ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈ ವೇದಿಕೆಯ ಮೂಲಕ ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದ್ದು, ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್, ಉಳ್ಳಾಲ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಫೀಕ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಜಿಲ್ಲಾ ಅರಣ್ಯ ಅಧಿಕಾರಿ ರವಿಶಂಕರ್, ವಿವಿಧ ಇಲಾಖಾಧಿಕಾರಿಗಳು ಇದ್ದರು.ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಸ್ವಾಗತಿಸಿದರು.