ಶಿರಹಟ್ಟಿ: ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಆದರೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಸಲುವಾಗಿ ಸರಿಯಾದ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ನೂಕುನುಗ್ಗಲು ಉಂಟಾಯಿತು. ಅರ್ಜಿ ಸಲ್ಲಿಸಲು ಗಂಟೆಗಟ್ಟಲೆ ಕಾಯುವಂತಾಯಿತು.ಶನಿವಾರ ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಏರ್ಪಡಿಸಿದ್ದ ಸರ್ಕಾರದ ನೂತನ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ವೃದ್ಧರು, ಮಹಿಳೆಯರು, ಅಂಗವಿಕಲರು ಅರ್ಜಿ ಸಲ್ಲಿಸಲು ಪರದಾಡಿದರು. ಅರ್ಜಿ ಸಲ್ಲಿಸಲು ಬಂದ ಫಲಾನುಭವಿಗಳು ಎಲ್ಲಿಗೆ ಅರ್ಜಿ ನೀಡಬೇಕು? ಯಾವ ಅಧಿಕಾರಿಯನ್ನು ಸಂಪರ್ಕಿಸಬೇಕು? ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಗೊಂದಲಕ್ಕೀಡಾದರು. ಸರತಿ ವ್ಯವಸ್ಥೆ ಹಾಗೂ ಪ್ರತ್ಯೇಕ ಅರ್ಜಿ ಸ್ವೀಕಾರ ಕೌಂಟರ್‌ಗಳು ಇರಲಿಲ್ಲ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇರಲಿಲ್ಲ.
ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ತಾಕೀತು: ಬಸ್ ನಿಲ್ದಾಣದ ಸುತ್ತಲಿರುವ ಚಹಾ, ಎಗ್‌ರೈಸ್ ಹಾಗೂ ತಹಸೀಲ್ದಾರ್ ಕಾರ್ಯಾಲಯದ ವರೆಗೂ ಇರುವ ಇನ್ನಿತರ ಅಂಗಡಿಗಳಲ್ಲಿ ಎಗ್ಗಿಲ್ಲದೇ ಬೆಳಗಿನ ಜಾವಾ ಅಕ್ರಮ ಮದ್ಯ, ಗಾಂಜಾ ಮಾರಾಟವಾಗುತ್ತಿದೆ. ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಮದ್ಯ ಸೇವಿಸಿದವರು ವಿದ್ಯಾರ್ಥಿಗಳನ್ನು ಚುಡಾಯಿಸುತ್ತಾರೆ. ಅಮಾಯಕರ ಜೀವದ ಜತೆ ಚೆಲ್ಲಾಟವಾಡದೇ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಶಾಸಕ ಚಂದ್ರು ಲಮಾಣಿ ಅವರು ಸಿಪಿಐ ಬಿ.ವಿ. ನ್ಯಾಮಗೌಡ, ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಅವರಿಗೆ ಸೂಚಿಸಿದರು.
ವಿವಿಧ ಯೋಜನೆಗಳಡಿಯಲ್ಲಿ ಫಲಾನುಭವಿಗಳಿಂದ ಒಟ್ಟು ೧೬೫ ಅರ್ಜಿಗಳು ಸಲ್ಲಿಕೆಯಾಗಿದ್ದು, ಐಪಿಜಿಆರ್‌ಎಸ್ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವು ತಿಳಿಸಿದರು.ತಹಸೀಲ್ದಾರ್ ಕೆ. ರಾಘವೇಂದ್ರ ರಾವು, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ತಾಪಂ ಇಒ ರಾಮಣ್ಣ ದೊಡ್ಡಮನಿ, ಪಪಂ ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ ಇದ್ದರು.