'Pratibha Karanji' is useful for bringing out the latent talent in children.
- ಹೆಚ್. ಗಣಪತಿ ಹುಲ್ತಿಕೊಪ್ಪ ಅಭಿಮತ । ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ
---
ಕನ್ನಡಪ್ರಭ ವಾರ್ತೆ ಸೊರಬ
ಇಂದಿನ ಸ್ಪರ್ಧಾತ್ಮಕ ಶೈಕ್ಷಣಿಕ ಜಗತ್ತಿನಲ್ಲಿ ಕೇವಲ ಅಂಕಗಳಿಕೆ ಮತ್ತು ಪಠ್ಯದ ಓದುವಷ್ಟೇ ಸಾಲದು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಮತ್ತು ಅವರ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಅತ್ಯಂತ ಪ್ರಮುಖವಾದ ಮೈಲುಗಲ್ಲಾಗಿವೆ ಎಂದು ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು.
ತಾಲೂಕಿನ ಚಂದ್ರಗುತ್ತಿ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಸಬಾ ಬಿ ಚಂದ್ರಗುತ್ತಿ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲ ವಿದ್ಯಾರ್ಥಿಗಳೂ ಒಂದೇ ರೀತಿಯಲ್ಲಿ ಓದಿನಲ್ಲಿ ಮುಂಚೂಣಿಯಲ್ಲಿರಲು ಸಾಧ್ಯವಿಲ್ಲ. ಕೆಲವರು ಸಾಹಿತ್ಯ, ಕಲೆ, ಸಂಗೀತ, ನೃತ್ಯ, ನಾಟಕ ಅಥವಾ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರತಿಭೆ ಹೊಂದಿರುತ್ತಾರೆ. ಮಕ್ಕಳ ಆಸಕ್ತಿಯ ಕ್ಷೇತ್ರಗಳನ್ನು ಗುರುತಿಸಿ, ಅವರನ್ನು ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕಾದ ದೊಡ್ಡ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ ಎಂದರು.
ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಗ್ರಾಮೀಣ ಭಾಗದ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಇಂತಹ ಸಾರ್ಥಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಸಮಾಜಕ್ಕೆ ಮಾದರಿಯಾಗಿ, ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಸುಧಾಕರ್ ಪಿ. ನಾಯ್ಕ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವಂತ ಮಕ್ಕಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಯೊಂದು ತರಗತಿ ಮಟ್ಟದಲ್ಲೂ ಸ್ಪರ್ಧೆಗಳು ನಡೆಯಬೇಕು. ಶಿಕ್ಷಣದಲ್ಲಿ ಕೇವಲ ಅಂಕಗಳಿಕೆಯ ಹಿಂದೆ ಬೀಳದೆ, ಎಲ್ಕೆಜಿಯಿಂದ ೭ನೇ ತರಗತಿಯವರೆಗೆ ಮಕ್ಕಳನ್ನು ಸರಿಯಾದ ರೀತಿಯಲ್ಲಿ ಓದಿಸಿ, ವಿಷಯದ ಸಂಪೂರ್ಣ ಜ್ಞಾನವನ್ನು ಪಡೆದುಕೊಳ್ಳುವಂತೆ ಪೋಷಕರು ವಿಶೇಷ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಇಂತಹ ಶಾಲಾ ಹಂತದ ಸಾಂಸ್ಕೃತಿಕ ವೇದಿಕೆಗಳನ್ನು ಸಮರ್ಥವಾಗಿ ಬಳಸಿಕೊಂಡು ತಮ್ಮಲ್ಲಿರುವ ವಿಭಿನ್ನ ಕಲೆಗಳನ್ನು ಜಗತ್ತಿಗೆ ಪರಿಚಯಿಸಬೇಕು ಎಂದರು.
ಶಾಲೆಯ ಪ್ರಾಂಶುಪಾಲ ರಂಗನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಸರಸ್ವತಿ ವಿ. ನಾಯ್ಕ್, ಗಣಪತಿ, ಗುರುನಾಥ್, ಸಾಲಿಮಠ, ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
------
ಫೋಟೋ:೦೮ಕೆಪಿಸೊರಬ-೦೨
ಸೊರಬ ತಾಲೂಕಿನ ಚಂದ್ರಗುತ್ತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ನಡೆದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹುಲ್ತಿಕೊಪ್ಪ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.