ಬ್ಯಾಡಗಿ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿ ಅವರ ಸೃಜನಶೀಲತೆ, ಕಲಾತ್ಮಕ ಅಭಿವ್ಯಕ್ತಿ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಅತ್ಯವಶ್ಯಕವಾಗಿವೆ ಎಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಬಿ. ಬಣಕಾರ ಅಭಿಪ್ರಾಯಪಟ್ಟರು.
ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಮಕ್ಕಳಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಅನಾವರಣಗೊಳಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ, ಆತ್ಮವಿಶ್ವಾಸ ಹಾಗೂ ಸಾಂಸ್ಕೃತಿಕ ಅಭಿರುಚಿ ಬೆಳೆಯುತ್ತದೆ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವಲ್ಲಿ ಪ್ರತಿಭಾ ಕಾರಂಜಿ ಮಹತ್ವದ ಪಾತ್ರ ವಹಿಸುತ್ತದೆ. ಗ್ರಾಮೀಣ ಭಾಗದ ಮಕ್ಕಳಿಗೂ ತಮ್ಮಲ್ಲಿರುವ ಕಲಾ ಪ್ರತಿಭೆ, ಭಾಷಾ ಕೌಶಲ್ಯ ಹಾಗೂ ಸೃಜನ ಶೀಲತೆಯನ್ನು ಪ್ರದರ್ಶಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.2026-27ನೇ ಸಾಲಿನ ಹಂಸಭಾವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳಾದ ಎನ್.ಸುರೇಶಕುಮಾರ ಹಾಗೂ ಮಲ್ಲಿಕಾರ್ಜುನ ಬುರಡಿಕಟ್ಟಿ, ಟಿಪಿಇಒ ಎಸ್.ಟಿ. ಲಮಾಣಿ, ಆರ್.ಎ. ದೊಡ್ಮನಿ, ಎಪಿಎಂ ಹಾಗೂ ಶಾಲೆಯ ಮುಖ್ಯಶಿಕ್ಷಕ ಆಸಿಫ್ ನದಾಫ್ ತೊಗಣಸಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.