ಲಕ್ಷ್ಮೇಶ್ವರ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಿ.ಎಚ್.ಪಾಟೀಲ ಹೇಳಿದರು.
ಪ್ರತಿಭಾ ಕಾರಂಜಿ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆ ಒದಗಿಸುತ್ತದೆ, ಇದರಲ್ಲಿ ಯಶಸ್ವಿ ಮಕ್ಕಳಿಗೆ ಪ್ರಶಂಸಾ ಪತ್ರ ಮತ್ತು ಬಹುಮಾನ ನೀಡಲಾಗುತ್ತದೆ.ಇಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಉನ್ನತ ಮಟ್ಟದ ಸ್ಪರ್ಧೆಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಶಿರಹಟ್ಟಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರ ಮೆಡ್ಲೇರಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎಂ.ಗುತ್ತಲ, ಲಕ್ಷ್ಮೇಶ್ವರ ಕ್ಲಷ್ಟರ್ ಮಟ್ಟದ ಬಿಆರ್‌ಪಿ ಬಿ.ಎಂ. ಯರಗುಪ್ಪಿ ಮಾತನಾಡಿ ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ.ಅದನ್ನು ಗುರುತಿಸಿ, ಪ್ರೋತ್ಸಾಯಿಸಬೇಕು ಎಂದರು.ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು.ಈ ವೇಳೆ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.