-ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿ ಹಾಗೂ ನೆರೆಹಾವಳಿಯಂತಹ ಸಂದರ್ಭವನ್ನು ಎದುರಿಸುವ ಬಗ್ಗೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ತೀವ್ರ ಮಳೆಗಾಲ, ಗಾಳಿಯಿಂದ ಬೀಳುವ ಹಂತದಲ್ಲಿರುವ ಗಿಡಮರಗಳ ತೆರವು ಮೂಲಕ ಪ್ರಾಣಹಾನಿ ತಡೆಯುವ ಮತ್ತು ವಾಹನಗಳ ಸಂಚಾರ ದಟ್ಟಣೆಯಾಗದಂತೆ ನಿಗಾವಹಿಸುವ ಬಗ್ಗೆ ಮುಂಚಿತವಾಗಿ ಸಮೀಕ್ಷೆ ನಡೆಸಿ, ತೆರವು ಕಾರ್ಯಾಚರಣೆ ನಡೆಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ, ತಾಲೂಕು ಮಟ್ಟದ ತಂಡಗಳನ್ನೂ ರಚಿಸಿ ಸಮನ್ವಯತೆ ಸಾಧಿಸಿ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು.
ವಿದ್ಯುತ್ ಅವಘಡ ನಿಯಂತ್ರಣ, ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಆಗಬಹುದಾದ ರಸ್ತೆ ಸಂಪರ್ಕ ಕಡಿತ ಬಗ್ಗೆಯೂ ಈಗಿನಿಂದಲೇ ಅಧ್ಯಯನ ನಡೆಸಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ನೆರೆಹಾವಳಿ ಸಂದರ್ಭ ಎದುರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಕಾಳಜಿ ಕೇಂದ್ರ ಸ್ಥಾಪನೆ ನಿರ್ವಹಣೆ ಹಾಗೂ ನೆರೆಯಿಂದ ಭಾಧಿತವಾಗುವ ಗ್ರಾಮಗಳ ಬಗ್ಗೆ , ಈ ಹಿಂದೆ ಭಾದಿತವಾಗಿದ್ದ ಗ್ರಾಮಗಳ ಬಗ್ಗೆ ಅಧ್ಯಯನ ನಡೆಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ ಅವರು ಈಗಾಗಲೇ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ 24*7 ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ತಹಸೀಲ್ದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
21ವೈಡಿಆರ್1: ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು, ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ್ ಅವರ ಅಧ್ಯಕ್ಷತೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆ ನಡೆಯಿತು.