ಕಾರವಾರ: ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ತಿಳಿಸಿದರು.
ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿ, ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆ ಪ್ರಕೃತಿ ಸೌಂದರ್ಯದಿಂದ ಕೂಡಿದೆ. ಗಡಿಭಾಗದ ಜಿಲ್ಲೆಯಾಗಿರುವುದರಿಂದ ಇಲ್ಲಿ ಕೆಲಸ ಮಾಡುವುದು ಚಾಲೆಂಜ್ ಆಗಿದ್ದು, ಜಿಲ್ಲೆಯ ಎಲ್ಲರ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಜತೆಗೂಡಿ ಜನರಿಗೆ ಉತ್ತಮ ಸೇವೆ ನೀಡಲಾಗುವುದು ಎಂದರು.ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ. ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು, ಯಾರೂ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರ ಮೇಲೆ ಸುಳ್ಳು ಕೇಸ್ ನೀಡಬಾರದು. ರಾಜ್ಯದ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವುದರಿಂದ ಜಿಲ್ಲೆಯ ಪತ್ರಿಯೊಂದು ಹಳ್ಳಿಯ ಇಂಚಿಂಚೂ ಮಾಹಿತಿ ಗೊತ್ತಿದೆ. ಪ್ರತಿ ಹೋಬಳಿಯಲ್ಲಿ ಮಾಹಿತಿದಾರರಿದ್ದು, ಕಾನೂನನ್ನು ಯಾರು ದುರುಪಯೋಗ ಮಾಡಿಕೊಳ್ಳಬಾರದು ಒಂದು ವೇಳೆ ಕಾನೂನು ದುರುಪಯೋಗ ಮಾಡಿಕೊಂಡಲ್ಲಿ ಅಂತಹವರ ವಿರುದ್ಧ ಹೊಸ ಕಾನೂನಿಂತೆ ಕ್ರಮ ಕೈಗೊಂಡು ಹೆಡೆಮುರಿ ಕಟ್ಟಲಾಗುವುದು ಎಂದರು.
ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದರೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಹಾಗೂ ಜಿಲ್ಲೆಯ ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ಮಾಹಿತಿ ಇದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚಿಸಿ ಅಪಘಾತ ವಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲಾಗುವುದು ಮತ್ತು ನಗರಗಳಲ್ಲಿ ಟ್ರಾಫಿಕ್ ನಿಯಮ, ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಂಡು ಟ್ರಾಫಿಕ್ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದರು.ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಹದ್ದಿನ ಕಣ್ಣು ಇಡಲಾಗಿದೆ. ಯಾವುದೇ ಮಾಹಿತಿಯನ್ನು ಪರಾಮರ್ಶಿಸದೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬಾರದು. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ, ಶಿಸ್ತು, ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಭಾರತ ಟಿ- 20 ವಿಶ್ವಕಪ್ ಗೆದ್ದ ರೀತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಜನರ ಮನಸ್ಸಿನ ಕಪ್ ಗೆಲ್ಲುತ್ತೇವೆ ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಹಾಗೂ ಜಿಲ್ಲೆಯ ಎಲ್ಲ ಡಿವೈಎಸ್‌ಪಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.