ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

KannadaprabhaNewsNetwork |  
Published : Dec 23, 2024, 01:00 AM IST
21ಎಚ್ಎಸ್ಎನ್20 :   ಬೇಲೂರು ತಾಲೂಕು  ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ  ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದ ಆಶಯಕ್ಕೆ ಧಕ್ಕೆ ತರುವ ಹಾಗೂ ಮಹಿಳೆಯ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಡಾ.ವಿಜಯ್ ಕುಮಾರ್ ಕಿಡಿಕಾರಿದರು.

ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಅವರು ಮಾತನಾಡಿ, ಲೋಕಸಭೆಯಲ್ಲಿ ಅಮಿತ್ ಶಾ ಬಿ.ಆರ್‌.ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದ ಅಡಿಯಲ್ಲಿ ಭಾರತದ ವ್ಯವಸ್ಥೆ ಸಾಗುತ್ತಿದೆ. ದೇಶದ ಗೃಹಮಂತ್ರಿ ಕೆಟ್ಟ ಪದ ಬಳಸಿ ಬೇಕಾಬಿಟ್ಟಿ ಮಾತನಾಡಿರುವುದು ಖಂಡನೀಯ. ರಾಜ್ಯದ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಮಹಿಳಾ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಸಿದ್ದು ಮಹಿಳೆಯರಿಗೆ ಗೌರವ ಕೊಡುವ ಸಂಸ್ಕೃತಿ ಇವರಿಗೆ ಇಲ್ಲ. ತಾವು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ರಾಹುಲ್ ವಿರುದ್ಧ ಸುಳ್ಳು ಆರೋಪ ಮಾಡುವುದರಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಎಐಸಿಸಿ ಸದಸ್ಯ ಗಂಡಸಿ ಬಿ.ಶಿವರಾಂ ಮಾತನಾಡಿ, ಅನ್ಯಪಕ್ಷದಿಂದ ಕಾಂಗ್ರೆಸ್ಸಿಗೆ ಬಂದವರನ್ನು ಹೊರಗಿನವರು ಎಂದು ಕಾಣಬಾರದು. ಈ ಹಿಂದೆ ಅವರಿದ್ದ ಪಕ್ಷದಿಂದ ಬೇಸತ್ತು ಬಂದಿರುತ್ತಾರೆ. ಕಾರ್ಯಕರ್ತರು ಅವರನ್ನು ಗೌರವದಿಂದ ಕಾಣಬೇಕು. ಇತ್ತೀಚಿನ ದಿನಗಳಲ್ಲಿ ಅನ್ಯ ಪಕ್ಷದಿಂದ ಬೇಸತ್ತು ಸಾಕಷ್ಟು ಮಂದಿ ಕಾಂಗ್ರೆಸ್ ಸೇರುತ್ತಿದ್ದು ಮುಂದಿನ ದಿನಗಳಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ಬೇಲೂರು ತಾಲೂಕು ವೀರಶೈವ ಯುವಕರ ಸಂಘದ ಮಾಜಿ ಅಧ್ಯಕ್ಷ ಹೆಬ್ಬಾಳು ಉಮಾಶಂಕರ್‌ ಮಾತನಾಡಿ, ಬಿಜೆಪಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರಿದ್ದೇವೆ. 2028ರ ಚುನಾವಣೆಯಲ್ಲಿ ಬೇಲೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಲಿದೆ. ಮಾಜಿ ಸಚಿವ ಗಂಡಸಿ ಬಿ.ಶಿವರಾಂ ಶಾಸಕರಾಗಿ ಸಚಿವ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದರು.

ಜೆಡಿಎಸ್ ಹಾಗೂ ಬಿಜೆಪಿ ಪಕ್ಷ ತೊರೆದು 250 ಮಂದಿ ಕಾಂಗ್ರೆಸ್ ಸೇರ್ಪಡೆಯಾದರು. ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರೇಖಾ ಹುಲಿಯಪ್ಪ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ದೇಶಾಣಿ ಆನಂದ್, ಕಾಂಗ್ರೆಸ್ ಮುಖಂಡರಾದ ಎಂ.ಆರ್‌.ವೆಂಕಟೇಶ್, ಎಚ್.ಎಂ.ಮಂಜಪ್ಪ, ತೌಫಿಕ್, ಶಾಂತಕುಮಾರ್, ಬಿ.ಎಂ.ಸಂತೋಷ್, ಕೆ.ಎಂ.ವೀರಣ್ಣ, ಶರತ್ ನಿಂಗಪ್ಪ, ಯತೀಶ್ ಮಲ್ಲಾಪುರ, ಎಚ್.ಆರ್.ಕಲ್ಲೇಶ್, ಉಮಾಶಂಕರ, ಎಚ್.ಬಿ.ಚಂದ್ರಶೇಖರ್, ಅಶೋಕ್ ಹಾಗೂ ಇತರರು ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ