ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ 13ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಇದುವರೆಗೂ 5 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅಂದಾಜು 15 ಸಾವಿರ ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಅಂದಾಜು 100 ನಿಯೋಜಕರು, ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಉದ್ಯೋಗ ಮೇಳವನ್ನು ಯಶಸ್ವಿಯಾಗಿ ನಿಭಾಯಿಸಲು ಅಧಿಕಾರಿಗಳ ಸಹಭಾಗಿತ್ವ ಮುಖ್ಯ. ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಆಯಾ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಮೂಲಕ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮೂಲಕವು ಕೂಡ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರಕೈಗೊಂಡು ಪ್ರತಿ ಮನೆಗೂ ಮಾಹಿತಿ ತಲುಪಿಸಲು ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ಮಾತನಾಡಿ, ಉದ್ಯೋಗ ಮೇಳಕ್ಕೆ ಉದ್ಯೋಗಾಂಕ್ಷಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾ.ಪಂ. ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಉದ್ಯೋಗಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಎಡಿಸಿ ಅಮರೇಶ್.ಹೆಚ್, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಮತ್ತಿತರ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.