ಕನ್ನಡಪ್ರಭ ವಾರ್ತೆ ಯಾದಗಿರಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಸುರಪುರ (ಶೋರಾಪೂರ) ವಿಧಾನಸಭಾ ಉಪ ಚುನಾವಣೆ-2024 ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ. ಸುಶೀಲಾ ಹೇಳಿದರು.ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಕುರಿತು ವಿವರ ನೀಡಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಚುನಾವಣಾ ಆಯೋಗವು ರಾಷ್ಟ್ರಾದ್ಯಂತ ಏಳು ಹಂತದಲ್ಲಿ ಹಾಗೂ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ತಿಳಿಸಿದೆ.
ಅದರನ್ವಯ ರಾಯಚೂರು ಮತ್ತು ಕಲಬುರಗಿ ಲೋಕಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಾದಗಿರಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಶೋರಾಪೂರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತದ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದರು.ರಾಯಚೂರು ಲೋಕಸಭಾ ಕ್ಷೇತ್ರ (ಪರಿಶಿಷ್ಟ ಪಂಗಡ ಅಭ್ಯರ್ಥಿಗೆ ಮೀಸಲು) ವ್ಯಾಪ್ತಿಯಲ್ಲಿ ಸುರಪುರ (ಶೋರಾಪೂರ) ಶಹಾಪೂರ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರಗಳು ಬರಲಿವೆ. ಅದರಂತೆ, ಕಲಬುರಗಿ (ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಮೀಸಲು) ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಗುರುಮಠಕಲ್ ವಿಧಾನಸಭಾ ಕ್ಷೇತ್ರ ಬರಲಿದೆ ಎಂದರು.
10,26,778 ಮತದಾರರು, 1134 ಮತಗಟ್ಟೆಗಳುಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1134 ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಈ ಪೈಕಿ, ನಗರ ಪ್ರದೇಶಗಳಲ್ಲಿ 203 ಹಾಗೂ ಗ್ರಾಮಾಂತರ ಕ್ಷೇತ್ರಗಳಲ್ಲಿ 931 ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಶೋರಾಪೂರದಲ್ಲಿ 317, ಶಹಾಪೂರದಲ್ಲಿ 265, ಯಾದಗಿರಿಯಲ್ಲಿ 268, ಗುರುಮಠಕಲ್‌ದಲ್ಲಿ 284 ಕೇಂದ್ರ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಅರ್ಹತಾ ದಿನಾಂಕ ಇದೇ ಜ.1ರಂತೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯಂತೆ 10,26,778 ಮತದಾರರು ಅರ್ಹರಾಗಿದ್ದು, ಈ ಪೈಕಿ 5,12,572 ಪುರುಷ ಮತದಾರರು ಹಾಗೂ 5,14,137 ಮಹಿಳಾ ಮತದಾರರು ಹಾಗೂ 69 ಲಿಂಗತ್ವ ಅಲ್ಪಸಂಖ್ಯಾತರ ಮತದಾರರು ಇದ್ದಾರೆ.ಶೋರಾಪೂರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2,81,375 ಮತದಾರರು, ಶಹಾಪೂರ ವಿಧಾನಸಭಾ ಕ್ಷೇತ್ರದಲ್ಲಿ 2,45,477 ಮತದಾರರು, ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2,46,253 ಮತ್ತು ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ 2,53,673 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಡಾ. ಸುಶೀಲಾ ಹೇಳಿದರು.
ಸುರಪುರ ವಿಧಾನಸಭೆ ಉಪ ಚುನಾವಣೆ: ಏ.19ನಾಮಪತ್ರ ಸಲ್ಲಿಕೆಗೆ ಕೊನೆ ದಿನಕನ್ನಡಪ್ರಭ ವಾರ್ತೆ ಯಾದಗಿರಿ
ಚುನಾವಣಾ ಆಯೋಗದ ನಿರ್ದೇಶನದಂತೆ ಸುರಪುರ (ಶೋರಾಪೂರ) ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳಾ ಪಟ್ಟಿ ಈ ರೀತಿ ಪ್ರಕಟಿಸಿದೆ. ಇದೇ ಎ.12ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಎ.19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎ.20 ರಂದು ನಾಮಪತ್ರ ಪರಿಶೀಲಿಸಲಾಗುತ್ತದೆ. ನಾಮಪತ್ರ ಹಿಂದಕ್ಕೆ ಪಡೆಯಲು ಎ.22ರಂದು ಕೊನೆ ದಿನವಾಗಿದೆ. ಮೇ.7ರಂದು ಮತದಾನ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆಯಲಿದ್ದು, ಜೂ.6 ಚುನಾವಣೆ ಮುಕ್ತಾಯಗೊಳಿಸುವ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ್, ಎಸ್ಪಿ ಜಿ. ಸಂಗೀತಾ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.