ಕನ್ನಡಪ್ರಭ ವಾರ್ತೆ ಮಡಿಕೇರಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು 15ರಂದು ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಿನಾಚರಣೆ ಪ್ರಯುಕ್ತ ಬೀದರ್‌ನಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸಂಪಾಜೆಯಿಂದ ಶಿರಂಗಾಲದ ಕಡುವಿನ ಹೊಸಹಳ್ಳಿ ಗಡಿಭಾಗದವರೆಗೆ ಮಾನವ ಸರಪಳಿ ನಡೆಸಲು ಉದ್ದೇಶಿಸಲಾಗಿದ್ದು, ಕೊಡಗು ಜಿಲ್ಲೆ ಅರಣ್ಯ ಪ್ರದೇಶ ಹೊಂದಿರುವುದರಿಂದ ಕೆಲವು ವಿನಾಯಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಆಚರಣೆಯನ್ನು ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಯಶಸ್ಸುಗೊಳಿಸಬೇಕಿದೆ. ಸದ್ಯ ಆಯಾಯ ಗ್ರಾಮ/ ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮಾನವ ಸರಪಳಿ ಅಥವಾ ರಿಲೇ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸಿಗೆ ಮನವಿ ಮಾಡಿದರು.ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಎಲ್ಲರೂ ಕೈಜೋಡಿಸುವಂತೆ ಕೋರಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ಸಂಪಾಜೆಯಿಂದ ಶಿರಂಗಾಲ ಬಳಿಯ ಕಡುವಿನ ಹೊಸಳ್ಳಿವರೆಗೆ ಸುಮಾರು 72 ಕಿ.ಮೀ.ವರೆಗೆ ಮಾನವ ಸರಪಳಿ/ ರಿಲೇ ಮೂಲಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.ಸದ್ಯ ಕೊಡಗು ಜಿಲ್ಲೆಯಲ್ಲಿ ಮಳೆ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ ಎಂದರು.
ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ 10 ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತಿಳಿಸಿದರು.ಪ್ರಮುಖರಾದ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ರೇವತಿ ರಮೇಶ್ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಂದು ವಿವಿಧ ಸಮಾಜಗಳ ಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರವರ ಸಾಂಸ್ಕೃತಿಕ ಉಡುಪುನಲ್ಲಿ ಪಾಲ್ಗೊಂಡರೆ ಆಕರ್ಷಣೀಯವಾಗಿರುತ್ತದೆ ಎಂದು ಸಲಹೆ ಮಾಡಿದರು.ಮುನೀರ್ ಅಹ್ಮದ್ ಮಾತನಾಡಿ, ಲಯನ್ಸ್, ರೋಟರಿ, ಜಾನಪದ ಪರಿಷತ್ತು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ಸುಗೊಳಿಸಬೇಕು ಎಂದು ಸಲಹೆ ಮಾಡಿದರು.ಪ್ರಮುಖರಾದ ಎಚ್.ಎಲ್.ದಿವಾಕರ, ಯಾಕೂಬ್, ಅಮೀದ್, ವೀರಭದ್ರಯ್ಯ, ಜಗದೀಶ್, ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ ಮತ್ತಿತರರು ಮಾಹಿತಿ ನೀಡಿದರು.
ಪ್ರಮುಖರಾದ ಚಂದ್ರಪ್ರಸಾದ್, ಪ್ರಾಂಶುಪಾಲ ವಿಜಯ್, ಅಧಿಕಾರಿಗಳಾದ ಹೊನ್ನೇಗೌಡ, ಪ್ರವೀಣ್ ಕುಮಾರ್, ಕವಿತಾ, ಶಿವಶಂಕರ, ಬಾಲಕೃಷ್ಣ ರೈ ಇತರರು ಇದ್ದರು.