ರಾಜ್ಯೋತ್ಸವ ಆಚರಣೆಗೆ ಸಿದ್ಧತೆ : ಡಾ. ಬಿ. ಸುಶೀಲಾ

KannadaprabhaNewsNetwork |  
Published : Oct 30, 2023, 12:31 AM IST
ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ. | Kannada Prabha

ಸಾರಾಂಶ

ರಾಜ್ಯೋತ್ಸವ ಆಚರಣೆಗೆ ಸಿದ್ಧತೆ : ಡಾ. ಬಿ. ಸುಶೀಲಾ

ಕನ್ನಡಪ್ರಭ ವಾರ್ತೆ ಯಾದಗಿರಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ತಿಳಿಸಿದ್ದಾರೆ. ಇದರಂಗವಾಗಿ, ಈಗಾಗಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಆದೇಶದನ್ವಯ ಯಾದಗಿರಿ ಜಿಲ್ಲೆಯಾದ್ಯಂತ ಈ ಕೆಳಕಂಡ ಅಂಶಗಳನ್ನು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ತಿಳಿಸಿದ್ದಾರೆ. ನ.1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು. ನ.1ರ ಬೆ.9 ಕ್ಕೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು. ಅಂದು ಸಂಜೆ 5 ಗಂಟೆಗೆ ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು. ಸಂಜೆ 7 ಗಂಟೆಗೆ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು. ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆ ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ-ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ