ಕೊಪ್ಪಳ: 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಂಘಟನಾತ್ಮಕ ಸಿದ್ಧತೆ ಆರಂಭಿಸಲಾಗುವುದು ಎಂದು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
‘ಭಾರತ್ ಜೋಡೋ-2’ ಪಾದಯಾತ್ರೆ ಜಿಲ್ಲೆಗೆ ಬರಲಿದ್ದು, ಗಂಗಾವತಿ ಹಾಗೂ ಕುಷ್ಟಗಿ ಕ್ಷೇತ್ರಗಳಲ್ಲಿ ಪಾದಯಾತ್ರೆ ಆಯೋಜಿಸಲಾಗುವುದು. ಕಾರ್ಯಕ್ರಮದ ವಿವರಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಗಂಗಾವತಿ ಕ್ಷೇತ್ರದಲ್ಲಿ ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಇದಕ್ಕೆ ಬೇರೆ ಬೇರೆ ಕಾರಣಗಳು ಇರಬಹುದು. ಆದರೆ ಈ ಬಾರಿ ಖಂಡಿತ ನಮಗೆ ಗೆಲುವು ಆಗಲಿದೆ. 2028ರ ಚುನಾವಣೆಯಲ್ಲಿ ಗಂಗಾವತಿಯಲ್ಲಿ ಪಕ್ಷದ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಭಿನ್ನಾಭಿಪ್ರಾಯಕ್ಕೆ ಜಿಲ್ಲೆಯಲ್ಲಿ ಇನ್ನು ಮುಂದೆ ಅವಕಾಶ ಇರುವುದಿಲ್ಲ. ಇಕ್ಬಾಲ್ ಅನ್ಸಾರಿ ಅವರೊಂದಿಗೆ ಈಗಾಗಲೇ ಮಾತನಾಡಿದ್ದು, ಅವರು ಸಹ ಪಕ್ಷದ ಸಂಘಟನೆಯಲ್ಲಿ ಕೈಜೋಡಿಸಲಿದ್ದಾರೆ ಎಂದರು.ಜಿಲ್ಲೆಯ ಕಾಂಗ್ರೆಸ್ ನಾಯಕರ ಯಾವುದೇ ಮುನಿಸಿಲ್ಲ. ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡದಂತೆ ಅವರಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಹೈಕಮಾಂಡ್ ನಿರ್ಧಾರ: ಪಕ್ಷದ ಜಿಲ್ಲಾಧ್ಯಕ್ಷರ ನೇಮಕ ಪರಿಚಯವನ್ನು ಹೈಕಮಾಂಡ್ ನಡೆಸಿ, ಎಐಸಿಸಿ ಹಂತದಲ್ಲಿ ರಾಜ್ಯದ 35 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ನನ್ನನ್ನು ಆಯ್ಕೆ ಕುರಿತು ಗೊಂದಲ ಇಲ್ಲ, ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಿದೆ. ಈ ಕುರಿತು ಚರ್ಚೆ ಅನಗತ್ಯ ಎಂದರು.