ಗದಗ: ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಜಾರಿಗೆ ಬರಲಿರುವ ವಿಬಿ ಜಿ ರಾಮ್ ಜಿ(ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಡ್‌ಗಾರ್ ಅಂಡ್ ಆಜೀವಿಕಾ ಮಿಷನ್) ಯೋಜನೆಗೆ ಜಿಲ್ಲೆಯಲ್ಲಿ ಸಿದ್ಧತೆ ಆರಂಭವಾಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯ ಬದಲಿಗೆ ಜಾರಿಯಾಗುತ್ತಿರುವ ಈ ಯೋಜನೆ ಮಹತ್ವ ಪಡೆದುಕೊಂಡಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಮುಂಬರುವ ದಿನಗಳಲ್ಲಿ ಎಲ್ಲ ಅರ್ಹ ಕಾರ್ಮಿಕರಿಗೆ ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ಎಂಬ ಹೊಸ ಉದ್ಯೋಗ ಚೀಟಿಗಳನ್ನು ವಿತರಿಸಲಾಗುತ್ತಿದೆ. ಇದೇ ವೇಳೆ ಇದುವರೆಗೆ ಯಾವುದೇ ಯೋಜನೆಯಡಿ ನೋಂದಾಯಿಸಿಕೊಳ್ಳದ ಗ್ರಾಮೀಣ ಕಾರ್ಮಿಕರು ಹಾಗೂ ಯುವಕರು ಹೊಸದಾಗಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯುವ ಅವಕಾಶವನ್ನು ಹೊಸ ಯೋಜನೆಯಲ್ಲಿ ಲಭ್ಯವಾಗಲಿದೆ.
122 ಗ್ರಾಪಂಗಳಲ್ಲಿ ಜಾರಿ: ಜಿಲ್ಲೆಯ 7 ತಾಲೂಕುಗಳ 122 ಗ್ರಾಮ ಪಂಚಾಯಿತಿಗಳಲ್ಲೂ ಯೋಜನೆಯನ್ನು ಏಕಕಾಲದಲ್ಲಿ ಜಾರಿಗೊಳಿಸಲು ಜಿಲ್ಲಾ ಪಂಚಾಯಿತಿ ಸಿದ್ಧತೆ ನಡೆಸಿದೆ. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ಕಾರ್ಯವೂ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಆಯುಕ್ತಾಲಯದ ಮಾರ್ಗಸೂಚಿಯಂತೆ ಕ್ರಿಯಾಯೋಜನೆ ಸಿದ್ಧಪಡಿಸುವ ಕಾರ್ಯವು ವೇಗ ಪಡೆದಿದೆ.ಈ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಗೂಲಿ ₹382 ನಿಗದಿಯಾಗಿದ್ದು, ಇದು ಹಿಂದಿನ ಕೂಲಿಗಿಂತ ಹೆಚ್ಚಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದಾಗಿ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ದೂರ ಹೋಗುವುದನ್ನು ತಪ್ಪಿಸುವುದು ಹಾಗೂ ಎಲ್ಲ ಋತುಮಾನದಲ್ಲಿ ಕೆಲಸಕ್ಕಾಗಿ ವಲಸೆ ಹೋಗುವವರ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಯನ್ನು ಜಿಲ್ಲಾಡಳಿತ ಹೊಂದಿದೆ.318 ಕಾಮಗಾರಿಗೆ ಅವಕಾಶ
ಅಗತ್ಯ ಸಿದ್ಧತೆ: ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಿಯಾಯೋಜನೆ ರೂಪಿಸುವ ಕೆಲಸ ನಡೆಯುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಲ್ಪಿಸುವ ಗುರಿಯಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ತಿಳಿಸಿದರು.