ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18218 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿವಮೊಗ್ಗದಲ್ಲಿ 16, ಭದ್ರಾವತಿ 6, ತೀರ್ಥಹಳ್ಳಿ 3, ಸಾಗರ 5, ಹೊಸನಗರ 3, ಶಿಕಾರಿಪುರ 4, ಸೊರಬ 2 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ರವರೆಗೆ ಜರುಗಲಿದ್ದು, 17193 ರೆಗ್ಯುಲರ್ ವಿದ್ಯಾರ್ಥಿಗಳು, 526 ರಿಪೀಟರ್ ಹಾಗೂ 496 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡುವಂತೆ ಹೇಳಿದರು.ಸಿಸಿ ಕ್ಯಾಮೆರಾ ಕಡ್ಡಾಯ :ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆದೇಶಿಸಿದರು. ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಬಿಇಒ ರಮೇಶ್, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.