ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜ.26ರಂದು ಜರುಗುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸಲು ಸಾಧಕರ ಪಟ್ಟಿಯನ್ನು ಸಾಕಷ್ಟು ಮುಂಚಿತವಾಗಿ ನೀಡುವಂತೆ ಇಲಾಖಾಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ, ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾದವರನ್ನೂ ಕೂಡ ಸನ್ಮಾನಿಸಲು ಸಿದ್ದತೆ ಮಾಡಿಕೊಳ್ಳುವಂತೆ ತಿಳಿಸಿ, ಕಾರ್ಯಕ್ರಮದ ಯಾವುದೇ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿ ರಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮನ್ವಯದಿಂದ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಾಲಂಕಾರ ಮಾಡುವಂತೆ ಮತ್ತು ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.