ಮುಂಗಾರು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಸೂಚನೆ

KannadaprabhaNewsNetwork |  
Published : May 22, 2024, 12:46 AM IST
21ಕೆಪಿಆರ್‌ಸಿಆರ್‌ 01  | Kannada Prabha

ಸಾರಾಂಶ

ರಾಯಚೂರು ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಅಧ್ಯಕ್ಷತೆಯಲ್ಲಿ ಬರ, ಮುಂಗಾರು ಪೂರ್ವ ಸಿದ್ಧತೆ ಸಭೆ ಜರುಗಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಬರ ಹಾಗೂ ಮುಂಗಾರು ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿ, ಬರದ ಸನ್ನಿವೇಶವು ಮರೆಯಾಗಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗಿದ್ದು, ಜೂನ್ ಮೊದಲನೇ ವಾರದಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು.

ಬೇಡಿಕೆಯಾನುಸಾರವಾಗಿ ಬೀಜ, ರಸಗೊಬ್ಬರ ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು. ಕಳಪೆ ಬೀಜ ಮಾರಾಟದ ಬಗ್ಗೆ ದೂರುಗಳಿದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಡಿಸಿ ಡಾ.ಚಂದ್ರಶೇಖರ ನಾಯಕ ಮಾತನಾಡಿ, ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ ಆದ್ಯತೆ ಮೇಲೆ ನೀರು ಪೂರೈಸಲಾಗುತ್ತಿದೆ. ಸಿಂಧನೂರು, ದೇವದುರ್ಗ, ರಾಯಚೂರು ನಗರದಲ್ಲಿ ನೀರಿನ ಸಮಸ್ಯೆಯಾಗಿದ್ದು ದಿನ ಬಿಟ್ಟು ದಿನ ನೀರು ಪೂರೈಸಲಾಗುತ್ತಿದೆ. ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಮೊದಲನೇ ಹಂತದಲ್ಲಿ ಬರ ಪರಿಹಾರ ಹಣ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. ತಾಂತ್ರಿಕ ಸಮಸ್ಯೆ ಇರುವ ರೈತರಿಗೆ ಸಹಾಯವಾಣಿ ಸ್ಥಾಪಿಸಿ ದೂರು ಇತ್ಯರ್ಥಪಡಿಸಲು ಸೂಚಿಸಲಾಗಿದೆ. ವಿವಿಧ ಹಂತದಲ್ಲಿ ಪರಿಹಾರ ವಿತರಣಾ ಕಾರ್ಯ ನಡೆಸಲಾಗುತ್ತಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಯಮಗಳಂತೆ ಪರಿಹಾರ ಕೈಗೊಳ್ಳಲಾಗುತ್ತಿದೆ. ತಾಂತ್ರಿಕ ಸಮಸ್ಯೆ ಇರುವ ರೈತರ ಖಾತೆಗಳ ಮಾಹಿತಿ ಕ್ರೋಢಿಕರಿಸಿ ಪರಿಹಾರ ವಿತರಣೆ ಗಮನ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರು, ತಹಸೀಲ್ದಾರ ಸುರೇಶ ವರ್ಮ, ಕೃಷಿ ಇಲಾಖೆ ಉಪನಿರ್ದೇಶಕಿ ದೇವಿಕಾ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ