ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ

KannadaprabhaNewsNetwork |  
Published : Oct 24, 2024, 12:47 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು. | Kannada Prabha

ಸಾರಾಂಶ

ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.26 ಹಾಗೂ 27 ರಂದು ನಡೆಯಲಿರುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.26 ಹಾಗೂ 27 ರಂದು ನಡೆಯಲಿರುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.26 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅ.27 ರಂದು ಮುಖ್ಯ ಪರೀಕ್ಷೆಯ ಪತ್ರಿಕೆ-1 ಹಾಗೂ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ. ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿಯಾಗಿ ಈ ಪರೀಕ್ಷೆಗಳ ಕಾರ್ಯ ನಿರ್ವಹಿಸಬೇಕು ಎಂದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಪರೀಕ್ಷೆ ಆರಂಭಕ್ಕೂ 2 ಗಂಟೆ ಅವಧಿಗೆ ಮೊದಲು ಖಜಾನೆಯಿಂದ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್‌ಗಳನ್ನು ಮಾರ್ಗಧಿಕಾರಿಗಳಿಗೆ ನೀಡಿ, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಓರ್ವ ಮಹಿಳಾ ಹಾಗೂ ಓರ್ವ ಪುರುಷ ಪೊಲೀಸರನ್ನು ಅಭ್ಯರ್ಥಿಗಳ ತಪಾಸಣೆ ಕಾರ್ಯನಿಯೋಜಿಸಬೇಕು. ಯಾವುದೇ ಲೋಪದೋಷಗಳು ಆಗದಂತೆ ಜವಾಬ್ದಾರಿಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಶಾಂತ ವಾತಾವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‌ನೆಟ್ ಕೇಂದ್ರಗಳನ್ನು ಪರೀಕ್ಷಾ ನಡೆಯುವ ದಿನದಂದು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶ ಹೊರಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಆಗಬಾರದು. ಕೆಇಎ ನಿರ್ದೇಶನಕ್ಕೆ ಕಾಯದೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ತಪ್ಪದೇ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕಳೆದ ಸೆ.29ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಅ.26 ಶನಿವಾರದಂದು ಮಧ್ಯಾಹ್ನ 2:30 ರಿಂದ 4:30 ರವರಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ-2 ಜರುಗಲಿದ್ದು, ಚಿತ್ರದುರ್ಗ ನಗರದ 5 ಕೇಂದ್ರಗಳಲ್ಲಿ ಒಟ್ಟು 1515 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅ.27 ರಂದು ಬೆಳಿಗ್ಗೆ 10:30 ರಿಂದ 12:30 ವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2:30 ರಿಂದ 4:30 ರವರಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದ್ದು, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಚಳ್ಳಕೆರೆ ನಗರದಲ್ಲಿನ 38 ಕೇಂದ್ರಗಳಲ್ಲಿ ಒಟ್ಟು 14,253 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವೀಕ್ಷಕರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ