ವಿಶ್ವ ಯೋಗ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ

KannadaprabhaNewsNetwork |  
Published : Jun 18, 2025, 11:49 PM IST
ಪೂರ್ವಭಾವಿ ಸಭೆ ನಡೆಯಿತು  | Kannada Prabha

ಸಾರಾಂಶ

ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಚರಿಸಬೇಕು

ಕಾರವಾರ: ಜೂ.21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಮುನ್ಸೂಚನೆಯಂತೆ ಕೋವಿಡ್ 19 ಮುನ್ನೆಚ್ಚರಿಕೆ ನಿಯಮಗಳನ್ನು ಅನುಸರಿಸಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಚರಿಸಬೇಕು. ಜಿಲ್ಲೆಯ ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಸಿ.ಸಿ. ರೋಟರಿ ಕ್ಲಬ್, ಯೋಗ ತರಬೇತಿ ನೀಡುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನಿಗಧಿತ ಸಂಖ್ಯೆಯ ಸಾರ್ವಜನಿಕರನ್ನು ಒಳಗೊಂಡು ಕಾರ್ಯಕ್ರಮ ಆಯೋಜಿಸುವಂತೆ ಮತ್ತು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಯೋಗಾಭ್ಯಾಸ ಮಾಡಲು ಅಗತ್ಯ ಪೂರಕ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಹಾಗೂ ತರಬೇತಿ ನೀಡಲು ಯೋಗ ಶಿಕ್ಷಕರನ್ನು ನಿಯೋಜಿಸುವಂತೆ ತಿಳಿಸಿದರು.

ಕೆಮ್ಮು, ನೆಗಡಿ, ಶೀತ ಜ್ವರದಿಂದ ಬಳಲುತ್ತಿರುವವರು ತಮ್ಮ ಮನೆಯಲ್ಲಿಯೇ ಯೋಗಾಭ್ಯಾಸ ಮಾಡುವಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಸ್ವಯಂ ಸೇವಾ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಮತ್ತು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಯೋಗಾಭ್ಯಾಸ ಮಾಡುವ ಜಿಲ್ಲೆಯ ಎಲ್ಲಾ ಜನತೆ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳಬೇಕು ಎಂದರು.

ನೌಕರರು ತಮ್ಮ ಕೆಲಸದ ಅವಧಿಯಲ್ಲಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಆಯುಷ್ ಸಚಿವಾಲಯವು ಯೋಗದ 5 ನಿಮಿಷದ ಅವಧಿಯ ಸರಳ ಆಸನಗಳನ್ನು ಪರಿಚಯಿಸಿದ್ದು ಇದರಲ್ಲಿ ಪ್ರಾಣಾಯಾಮ ಮತ್ತು ಧ್ಯಾನದ ಅಭ್ಯಾಸಗಳಿದ್ದು, ಎಲ್ಲ ನೌಕರರು ಮತ್ತು ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಡಿವೈಎಸ್ಪಿ ಗಿರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಭಾರತಿ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಜಗದೀಶ್ ಯಾಜಿ, ಆಯುಷ್ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಸಂಜು ನಾಯ್ಕ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ