ಕಾರಟಗಿ ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಭಾನುವಾರ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಕಾರಟಗಿ: ಕನ್ನಡ ದೇಶದ ಅತ್ಯಂತ ಶ್ರೇಷ್ಠ ಭಾಷೆಯಾಗಿದ್ದು, ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ನಮ್ಮ ಭಾಷೆಗಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎತ್ತಿಹಿಡಿಯಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಡಾ. ಸಾಬಣ್ಣ ಕಟ್ಟೇಕಾರ್ ಹೇಳಿದರು.
ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಭಾನುವಾರ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕರ್ನಾಟಕ ಏಕೀಕರಣದ ರೂವಾರಿಗಳು ಕಂಡ ಕನಸನ್ನು ನನಸಾಗಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಭಾಗದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜತೆಗೆ, ದೈನಂದಿನ ಸಂಭಾಷಣೆ ಹಾಗೂ ವ್ಯವಹಾರಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡದ ಅಸ್ಮಿತೆ ಮುಂದಿನ ಪೀಳಿಗೆಗೂ ಉಳಿಯುವಂತೆ ನೋಡಿಕೊಳ್ಳಬೇಕು ಎಂದರು.
ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಸ್ಥಾಯಿ ಸಮಿತಿ ಅಧ್ಯಕ್ಷ ದೊಡ್ಡಬಸವರಾಜ ಬೂದಿ, ಸದಸ್ಯರಾದ ಎಚ್. ಈಶಪ್ಪ, ಹಿರೇಬಸಪ್ಪ ಸಜ್ಜನ್, ಬಸವರಾಜ ಕೊಪ್ಪದ, ಎಂಜಿನಿಯರ್ ಮಂಜುನಾಥ ನಾಯಕ್, ಅಕೌಂಟೆಂಟ್ ನಾಗರಾಜ ತಳವಾರ, ಅಕ್ಷತಾ ಕಮ್ಮಾರ, ಚೆನ್ನಬಸವ, ಲಿಂಗೇಶ ಚೆಳ್ಳೂರು ಇದ್ದರು.
ಬಿಜೆಪಿ ಕಚೇರಿಯಲ್ಲಿ ಸಂಭ್ರಮ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಪಕ್ಷದ ಪದಾಧಿಕಾರಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರತ್ನಾಕುಮಾರಿ ಹಾಗೂ ತಿಪ್ಪಣ್ಣ ಜೋಗಳದಿನ್ನಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವ ನಿತ್ಯದ ಸಂಕಲ್ಪವಾಗಲಿ: ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪೂರ ಮಾತನಾಡಿ, ವಿಶ್ವಗುರು ಬಸವಣ್ಣನವರ ಸಾಮಾಜಿಕ ಹಾಗೂ ಸಾಹಿತ್ಯಿಕ ಪರಂಪರೆಯನ್ನು ಮುಂದುವರಿಸುವ ಜತೆಗೆ, ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿಯವರ ವಚನ ಸಂದೇಶಗಳನ್ನು ವಿಶ್ವದಾದ್ಯಂತ ಪಸರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.