ಕನ್ನಡಪ್ರಭ ವಾರ್ತೆ ಮಂಡ್ಯ
ಮಳವಳ್ಳಿಯಲ್ಲಿ ಹಮ್ಮಿಕೊಂಡಿರುವ ಜಗದ್ಗರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ೧೦೬೬ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಡಿ.೧೭ ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಗೆ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರಪತಿಗಳ ಕರ್ತವ್ಯದಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅವರು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಸ್ತೆಗಳನ್ನು ಸ್ವಚ್ಛತೆ ಮಾಡಬೇಕು. ಆ್ಯಂಬುಲೆನ್ಸ್ ಹಾಗೂ ತಜ್ಞ ವೈದ್ಯರ ಸೇವೆ ಒದಗಿಸಬೇಕು ಎಂದು ತಿಳಿಸಿದರು.
ಹೆಲಿಪ್ಯಾಡ್ ಸುತ್ತ ಬ್ಯಾರಿಕೇಡ್ ಅಳವಡಿಸುವುದು. ಗ್ರೀನ್ ರೂಮ್ ನಿರ್ಮಾಣ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ಅಡಚಣೆ ಆಗದಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಧಳದಲ್ಲಿ ಹಾಗೂ ಪ್ರವಾಸಿ ಮಂದಿರದಲ್ಲಿ ಇಂಟರ್ನೆಟ್ ಸಂಪರ್ಕ ಹಾಗೂ ಕಂಪ್ಯೂಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಸ್ಥಳಗಳಲ್ಲಿ ಅಗ್ನಿ ಶಾಮಕ ದಳದ ವಾಹನ ನಿಯೋಜಿಸಬೇಕು. ರಾಷ್ಟ್ರಪತಿಗಳ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಲೋಪ- ದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ಇಲಾಖೆಗಳಿಂದ ಸ್ಟಾಲ್‌ಗಳ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.