ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ತಡೆಗಟ್ಟಿ

KannadaprabhaNewsNetwork | Published : Feb 2, 2024 1:01 AM

ಸಾರಾಂಶ

ಮುಖ್ಯವಾಗಿ ಬಾಲ್ಯ ವಿವಾಹಗಳನ್ನು ತಡೆಯಲು ಶಾಲಾ, ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಆಪ್ತ ಸಮಾಲೋಚನೆ ಏರ್ಪಡಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಾಲ್ಯ ವಿವಾಹದ ಸುಳಿವು ಸಿಕ್ಕಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ತಿಳಿಸಿ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಈ ಕಾರ್ಯಕ್ಕೆ ಎಲ್ಲ ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ತಡೆಗಟ್ಟುವ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾನೂನು ಉಲ್ಲಂಘಿಸಿದರೆ ಕ್ರಮ

ಕಲ್ಯಾಣ ಮಂಟಪಗಳು, ದೇವಸ್ಥಾನಗಳು ಸೇರಿ ವಿವಾಹ ಕಾರ್ಯಕ್ರಮಗಳು ನಡೆಯುವ ಸ್ಥಳಗಳ ಮೇಲೆ ನಿಗಾ ಇಡಬೇಕು. ಅಲ್ಲಿನ ಮುಖ್ಯಸ್ಥರು, ಮಾಲೀಕರು ಮತ್ತು ಪುರೋಹಿತರಿಗೆ ಬಾಲ್ಯ ವಿವಾಹಗಳು ಜರುಗಲು ಅವಕಾಶ ನೀಡದಂತೆ ತಿಳಿಸಬೇಕು. ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ತೆಗೆದುಕೊಂಡರೂ ಈ ವರ್ಷ 10 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯ ಒದಗಿಸಬೇಕು ಎಂದರು.

ಮುಖ್ಯವಾಗಿ ಬಾಲ್ಯ ವಿವಾಹಗಳನ್ನು ತಡೆಯಲು ಶಾಲಾ, ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಆಪ್ತ ಸಮಾಲೋಚನೆ ಏರ್ಪಡಿಸಬೇಕು. ಗ್ರಾಮ ಮತ್ತು ವಾರ್ಡ್ ಗಳ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಬಾಲ್ಯ ವಿವಾಹದ ಸುಳಿವು ಸಿಕ್ಕಲ್ಲಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿ ತುರ್ತು ಕ್ರಮಕ್ಕೆ ಸಹಕರಿಸಬೇಕು. ಮೇಲಿನ ಅಧಿಕಾರಿಗಳು ತುರ್ತು ಸಂಪರ್ಕಕ್ಕೆ ಬಾರದಿದ್ದಾಗ ಸಹಾಯವಾಣಿ ಸಂಖ್ಯೆ 1098, 112 ಗೆ ಕರೆ ಮಾಡಿ ತಿಳಿಸಬೇಕು. ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

74 ಬಾಲ್ಯ ವಿವಾಹಗಳಿಗೆ ತಡೆ

2023ರ ಏಪ್ರಿಲ್ 2023 ರಿಂದ ಡಿಸೆಂಬರ್ ವರೆಗೆ ಜಿಲ್ಲೆಯಲ್ಲಿ 84 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 74 ಪ್ರಕರಣಗಳಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 10 ಬಾಲ್ಯ ವಿವಾಹಗಳು ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಮಾತೃವಂದನ ಯೋಜನೆಯಡಿ ಗರ್ಭಿಣಿ ಸ್ತ್ರೀಯರಿಗೆ ನೀಡುವ ಧನಸಹಾಯ ಯೋಜನೆಗೆ ಶೇ. 100 ರಷ್ಟು ಅರ್ಹ ಫಲಾನುಭವಿಗಳನ್ನು ನೋಂದಣಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಾಲ ನ್ಯಾಯ ಮಂಡಳಿಯಲ್ಲಿ ಈವರೆಗೆ 67 ಪ್ರಕರಣಗಳು ದಾಖಲಾಗಿದ್ದು, 21 ಪ್ರಕರಣಗಳನ್ನು ಇತ್ಯರ್ಥಗೊಂಡಿವೆ. ಬಾಕಿ ಪ್ರಕರಣಗಳು ಪ್ರಗತಿಯಲ್ಲಿವೆ. ಮಕ್ಕಳ ಕಲ್ಯಾಣ ಸಮಿತಿಗೆ ಈವರೆಗೆ 327 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳನ್ನೂ ಕಾನೂನು ರೀತಿಯ ವಿಲೇವಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮಾರ್ ಪೊಲೀಸ್ ಉಪಾಧೀಕ್ಷಕ ಎಸ್.ಶಿವಕುಮಾರ್, ನಿರೂಪಣಾಧಿಕಾರಿ ರಮೇಶ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

Share this article