- ಬಾಲ್ಯವಿವಾಹ ಕಂಡುಬಂದಲ್ಲಿ ಪೋಷಕರ ಮೇಲೆ ಪ್ರಕರಣ ದಾಖಲಿಸಲು ಡಾ. ಎಂ.ವಿ.ವೆಂಕಟೇಶ್ ಸೂಚನೆ
ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 25 ಬಾಲ್ಯವಿವಾಹ ಪ್ರಕರಣ ತಡೆಗಟ್ಟಿ 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಎಲ್ಲಾದರೂ ಬಾಲ್ಯ ವಿವಾಹ ಕಂಡುಬಂದಲ್ಲಿ, ಅಂತಹ ಪೋಷಕರ ಮೇಲೆ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಪರಿಶೀಲನಾ ಸಭೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದೆ. ಇದನ್ನು ತಡೆಗಟ್ಟಲು ವ್ಯಾಪಕವಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳಿಂದ ಬರುವ ಜುಲೈ ತಿಂಗಳಲ್ಲಿ ಎಲ್ಲ ಶಾಲಾ, ಕಾಲೇಜುಗಳಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಅಭಿಯಾನದ ರೀತಿ ಆಯೋಜಿಸಲು ಸೂಚಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ನರೇಗಾ ಕೂಲಿ ಕಾರ್ಮಿಕರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿ, ಬಾಲ್ಯವಿವಾಹ ನಡೆಯದೇ ಇರುವ ಮತ್ತು ಹದಿಹರೆಯದ ಬಾಲಕಿಯರು, ಗರ್ಭಿಣಿ ಆಗದೇ ಇರುವಂತಹ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ 2024ರ ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 26 ದೂರುಗಳು ಬಂದಿವೆ. ಅವುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆದು 2 ಪ್ರಕರಣಗಳಲ್ಲಿ ಕೋರ್ಟ್‌ನಿಂದ ತಡೆಯಾಜ್ಞೆ ಪಡೆಯಲಾಗಿದೆ. 1 ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಾಲನ್ಯಾಯ ಮಂಡಳಿಯಲ್ಲಿ ಹಿಂದಿನ 54, ಹೊಸದಾಗಿ 20 ಸೇರಿ 74, ಇದರಲ್ಲಿ 11 ಖುಲಾಸೆಯಾಗಿವೆ. ಪೋಕ್ಸೋದಡಿ 10 ಪ್ರಕರಣಗಳಿದ್ದು, 2 ಖುಲಾಸೆಯಾಗಿ 8 ಬಾಕಿ ಇವೆ. ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ 61 ಹಾಗೂ ಬಾಲಕರ ಬಾಲ ಮಂದಿರದಲ್ಲಿ 32 ಮಕ್ಕಳಿದ್ದಾರೆ. ಇದರಲ್ಲಿ ಅನಾಥ ಮಕ್ಕಳು, ಏಕಪೋಷಕ ಮಕ್ಕಳು, ಇಬ್ಬರು ಪೋಷಕರಿರುವ ಮಕ್ಕಳು ಇದ್ದಾರೆ ಎಂದು ತಿಳಿಸಿದರು.
- - - -28ಕೆಡಿವಿಜಿ35ಃ: