ಹಾವೇರಿ: ಬೇಸಿಗೆ ಕಾಲದಲ್ಲಿ ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ 24 ಗ್ರಾಮಗಳಿಗೆ 31 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಬೋರ್‌ವೆಲ್‌ಗಳ ದುರಸ್ತಿಗೆ ಸೂಚನೆ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋರ್‌ವೆಲ್‌ಗಳು ಹಾಗೂ ಆರ್‌ಒ ಘಟಕಗಳನ್ನು ಕಡ್ಡಾಯವಾಗಿ ಪರಿಶೀಲಿಸಿ, ಒಂದು ವೇಳೆ ಕೆಟ್ಟಿದ್ದರೆ ತುರ್ತಾಗಿ ಕ್ರಮಕೈಗೊಳ್ಳಲು ತಹಸೀಲ್ದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ನೀರು ಪೂರೈಕೆ ಬಗ್ಗೆ ಖುದ್ದಾಗಿ ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಲಾಗಾರ ಸ್ವಚ್ಛತೆ: ನದಿಪಾತ್ರಗಳಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ನೀರು ಮಲಿನವಾಗುವ ಸಾಧ್ಯತೆ ಇರುವುದರಿಂದ ಮೇಲ್ಮಟ್ಟ ಜಲಾಗಾರಗಳನ್ನು ಸ್ವಚ್ಛತೆ ಮಾಡುವ ಜತೆಗೆ, ಅವಶ್ಯಕತೆ ಇದ್ದಲ್ಲಿ ಸಾರ್ವಜನಿಕರಿಗೆ ನೀರನ್ನು ಕಾಯಿಸಿ ಕುಡಿಯಲು ಸೂಚನೆ ನೀಡುವಂತೆ ತಿಳಿಸಲಾಗಿದೆ.ಪೂರ್ವ ಮುಂಗಾರು ಸಿದ್ಧತೆ: ಪೂರ್ವ ಮುಂಗಾರು ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಜಿಲ್ಲೆಯಲ್ಲಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರಿಕ ರಕ್ಷಣಾ ದಳ, ಗೃಹ ರಕ್ಷಕ ದಳದವರಿಗೆ ಜಿಲ್ಲೆಯ ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ ಸ್ಥಳೀಯ ಸಮುದಾಯಕ್ಕೆ ಅರಿವು ಮೂಡಿಸುವ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಗಿದೆ.
ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ: ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಮನೆಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಾದ ಸಭಾಭವನ, ಶಾಲೆಗಳು, ಅಂಗನವಾಡಿಗಳಿಗೆ ಸಾರ್ವಜನಿಕರನ್ನು ಸ್ಥಳಾಂತರಿಸಲು ತಹಸೀಲ್ದಾರಗಳಿಗೆ ಹಾಗೂ ಉಪ ವಿಭಾಗಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ವಿದ್ಯುತ್ ಸರಬರಾಜು ಮೇಲೆ ಉಂಟಾಗಬಹುದಾದ ಅಂಶಗಳನ್ನು ಗಮನದಲ್ಲಿರಿಸಿ ವಿದ್ಯುತ್ ಮೂಲ ಸೌಕರ್ಯಗಳನ್ನು ಬಲಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.