ಹೊಸಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.29ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಬಹಿರಂಗ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.
ಪ್ರಧಾನಿ ಮೋದಿ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರತಾ ಪರಿಶೀಲನೆಗಾಗಿ ಎಸ್‌ಪಿಜಿ ತಂಡ ಏ.25ರಂದು ನಗರಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿದೆ. ಈಗಾಗಲೇ ಪ್ರಾಥಮಿಕವಾಗಿ ಭದ್ರತಾ ಪರಿಶೀಲನೆ ನಡೆಸಲಾಗಿದೆ ಎಂದು ಎಸ್ಪಿ ಬಿ.ಎಲ್. ಶ್ರೀಹರಿಬಾಬು ಕನ್ನಡಪ್ರಭಕ್ಕೆ ತಿಳಿಸಿದರು.
ಪ್ರಧಾನಿ ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಅವರ ಜೊತೆಗೆ ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಆಗಮಿಸಲಿದ್ದಾರೆ. ಮೂವರು ಲೋಕಸಭಾ ಅಭ್ಯರ್ಥಿಗಳು ಹಾಗೂ ಜನಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ತಿಳಿಸಿದರು.