ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ

KannadaprabhaNewsNetwork |  
Published : Mar 21, 2024, 01:09 AM IST
ಪೂರ್ವಾನುಮತಿ | Kannada Prabha

ಸಾರಾಂಶ

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಪಂ ಸಿಇಒ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ. ರಾಜಕೀಯ ಪಕ್ಷಗಳು ಅನುಮತಿಗಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು ವಿಸುಧಾ ಆ್ಯಪ್ ಪರಿಚಯಿಸಿದ್ದು, ಈ ಆಪ್ ಮೂಲಕ ಅಥವಾ ಖುದ್ದಾಗಿ ಎಆರ್‌ಒ ಕಚೇರಿಗೆ ಭೇಟಿ ನೀಡಿ ಅನುಮತಿ ಪಡೆಯಬಹುದಾಗಿದೆ. ಜಿಲ್ಲಾಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕು. ತಾರಾ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆಯು ಎಲ್ಲ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು, ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಸಹ ಸಹಕಾರ ನೀಡಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೆ ಬಾಕಿ ಇದ್ದಂತಹ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೆ ಮುಂದಾಗುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಉಪವಿಭಾಗಾಧಿಕಾರಿ ಮೆಹಬೂಬಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ