ರಾಮನಗರ: ಮಕ್ಕಳಿಗೆ ಉತ್ತಮ ಶಿಕ್ಷಣ, ಆಹಾರ, ಆರೋಗ್ಯ, ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರವು ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳು, ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಂಪೂರ್ಣ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.
ವಸತಿ ನಿಲಯದ ಸ್ವಂತ ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಕ್ತ ಕ್ರಮವಹಿಸಬೇಕು. ಈ ಬಗ್ಗೆ ಮೂರು ದಿನಗಳಲ್ಲಿ ವಿಸ್ತೃತ ವರದಿ ನೀಡಬೇಕು ಹಾಗೂ ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡತ್ತಿರುವ ಆಹಾರ, ವಸತಿ ಸೌಲಭ್ಯಗಳನ್ನು ಪರಿಶೀಲಿಸುವಂತೆ ಸೂಚಿಸಿದರು.
ನಂತರ ಚನ್ನಪಟ್ಟಣದ ಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಮಕ್ಕಳ ವಿಶೇಷ ಮಕ್ಕಳ ರಕ್ಷಣಾ ಘಟಕ ಇರಬೇಕು. ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಹಾಯಕರಿರಬೇಕು. ಮಕ್ಕಳ ಪ್ರತ್ಯೇಕ ದಾಖಲೆ ವಹಿ ನಿರ್ವಹಿಸಬೇಕು. ಮಕ್ಕಳ ರಕ್ಷಣೆಗೆ ಇರುವ ಮಕ್ಕಳ ಸುರಕ್ಷತಾ ಕಾಯ್ದೆ, ಬಾಲ ನ್ಯಾಯ ಕಾಯ್ದೆಗಳ ಮಾಹಿತಿ ನೀಡಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಭಿತ್ತಿಪತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು, ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಶಾಲೆಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಆಯೋಜಿಸಬೇಕು, ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಅಧ್ಯಕ್ಷರು ಹಾಗೂ ಸದಸ್ಯರು ಕಾರಾಗೃಹದಲ್ಲಿರುವ ಖೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಜಿಲ್ಲಾ ಕಾರಾಗೃಹದಲ್ಲಿ ಒಟ್ಟು 267 ಖೈದಿಗಳಿದ್ದು, ಇದರಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ 57 ಖೈದಿಗಳಿದ್ದಾರೆ, 18 ರಿಂದ 21 ವರ್ಷ ವಯಸ್ಸಿನ 38 ಖೈದಿಗಳಿದ್ದಾರೆ. 18 ವರ್ಷದೊಳಗಿನ ಹಾಗೂ ಮಹಿಳಾ ಖೈದಿಗಳಿರುವುದಿಲ್ಲ. ಖೈದಿಗಳನ್ನು ಭೇಟಿ ಮಾಡಿದ ಅವರು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜನಿ ,ಡಿವೈಎಸ್‌ಪಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿದೇಶಕ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಲಕ್ಷ್ಮೀದೇವಿ, ಚನ್ನಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.2ಕೆಆರ್ ಎಂಎನ್ 4.ಜೆಪಿಜಿ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕಾರಾಗೃಹಕ್ಕೆ ಭೇಟಿ ನೀಡಿ ಆಹಾರ ಪರಿಶೀಲಿಸಿದರು.