ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಡಾ. ಎಂ.ವಿ. ವೆಂಕಟೇಶ

KannadaprabhaNewsNetwork |  
Published : Aug 30, 2026, 02:00 AM IST
ಗದಗ ಜಿಪಂನಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಭಾಗವಹಿಸಿರುವುದು. | Kannada Prabha

ಸಾರಾಂಶ

ಗಜೇಂದ್ರಗಡ ತಾಲೂಕಿನಲ್ಲಿ ವಾಡಿಕೆಗಿಂತ ಶೇ. 45ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆ ಸರ್ಕಾರದಿಂದ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ಬರ ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.

ಗದಗ: ಬರ ನಿರ್ವಹಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಸೂಚಿಸಿದರು.

ನಗರದ ಜಿಪಂನಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ವಿವಿಧ ತಾಲೂಕುಗಳ ಮಳೆ ಪ್ರಮಾಣ, ಬರ ಪರಿಸ್ಥಿತಿ, ಬೆಳೆ ಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಲಭ್ಯತೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಗಜೇಂದ್ರಗಡ ತಾಲೂಕಿನಲ್ಲಿ ವಾಡಿಕೆಗಿಂತ ಶೇ. 45ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆ ಸರ್ಕಾರದಿಂದ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ಬರ ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಬೇಕು. ಯಾವುದೇ ಪ್ರದೇಶದಲ್ಲಿ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪರಿಹಾರ ಕ್ರಮ ಕೈಗೊಂಡು ಸಮರ್ಪಕ ನೀರು ಪೂರೈಕೆ ಮಾಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸುಮಾರು 37 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇರುವ ಕುರಿತು ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿಯೂ ಮೇವಿನ ಲಭ್ಯತೆಯಲ್ಲಿ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬರ ನಿರ್ವಹಣಾ ಕಾರ್ಯಗಳಲ್ಲಿ ವಿಬಿ ಜಿ ರಾಮ್ ಜಿ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು ಎಂದು ಡಾ. ವೆಂಕಟೇಶ ಸೂಚಿಸಿದರು.

ಗ್ಯಾರಂಟಿ ಪ್ರಗತಿ ಪರಿಶೀಲನೆ: ಜಿಲ್ಲೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಅವರು ಪರಿಶೀಲನೆ ನಡೆಸಿದರು. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯೋಜನೆಗಳ ಪ್ರಯೋಜನ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ಗಮನಹರಿಸಿ: ಜಿಲ್ಲೆಯ ಅಂಗನವಾಡಿ ಕಟ್ಟಡಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಅಗತ್ಯವಿರುವ ಅಂಗನವಾಡಿ ಕಟ್ಟಡಗಳನ್ನು ಹೊಸ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ದೊಡ್ಡ ಮಟ್ಟದಲ್ಲಿ ಜನಸ್ಪಂದನ ಆಯೋಜನೆ: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು. ಕಾರ್ಯಕ್ರಮಗಳಿಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಆಶಯವನ್ನು ಈಡೇರಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನೀಡಿರುವ ಎಲ್ಲ ನಿರ್ದೇಶನಗಳನ್ನು ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸಬೇಕು. ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲೆಯಲ್ಲಿ ಜೂ. 1ರಿಂದ ಆ. 28ರ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂಗಾರು ಅವಧಿಯಲ್ಲಿ ಒಟ್ಟಾರೆ ಶೇ. 34ರಷ್ಟು ಮಳೆ ಕೊರತೆ ದಾಖಲಾಗಿದೆ. ಅಂಕಿ ಅಂಶಗಳ ಪ್ರಕಾರ, ಈ ಅವಧಿಯಲ್ಲಿ ಜಿಲ್ಲೆಗೆ ವಾಡಿಕೆಯ 229.3 ಮಿಮೀ ಮಳೆಯಾಗಬೇಕಾಗಿದ್ದು, 152.2 ಮಿಮೀ ಮಳೆಯಾಗಿದೆ.

ತಾಲೂಕುವಾರು ಗಮನಿಸಿದರೆ ಗದಗ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ತಲಾ ಶೇ. 46ರಷ್ಟು ಮಳೆ ಕೊರತೆ ದಾಖಲಾಗಿದೆ. ರೋಣದಲ್ಲಿ ಶೇ. 39, ಮುಂಡರಗಿಯಲ್ಲಿ ಶೇ. 39, ಶಿರಹಟ್ಟಿಯಲ್ಲಿ ಶೇ. 31 ಮತ್ತು ಲಕ್ಷ್ಮೇಶ್ವರದಲ್ಲಿ ಶೇ. 20ರಷ್ಟು ಕೊರತೆ ಕಂಡುಬಂದಿದೆ. ನರಗುಂದ ತಾಲೂಕಿನಲ್ಲಿ ಶೇ. 10ರಷ್ಟು ಅಧಿಕ ಮಳೆ ದಾಖಲಾಗಿದೆ. ನರಗುಂದದಲ್ಲಿ ವಾಡಿಕೆಯ 197 ಮಿಮೀಗೆ 216.9 ಮಿಮೀ ಮಳೆಯಾಗಿದೆ.

ಆ. 1ರಿಂದ 28ರ ವರೆಗೆ ಜಿಲ್ಲೆಯಲ್ಲಿ ವಾಡಿಕೆಯ 73.1 ಮಿಮೀ ಮಳೆಗೆ 44.6 ಮಿಮೀ ಮಾತ್ರ ದಾಖಲಾಗಿದ್ದು, ಈ ಅವಧಿಯಲ್ಲಿಯೂ ಶೇ. 39ರಷ್ಟು ಕೊರತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಿ.ಆರ್. ಮುಂಡರಗಿ, ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರರು, ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿವಿಧೆಡೆ ಶ್ರೀರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ
ಕನಿಷ್ಠ ಕಾನೂನು ಅರಿವು ಇಲ್ಲದವರು ಅಯೋಗ್ಯರು: ಶಾಸಕ ಕೃಷ್ಣನಾಯ್ಕ ಸವಾಲು