ದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಜಾತ್ರಾಮಹೋತ್ಸವ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಶಿರಹಟ್ಟಿ
ಸೋಮವಾರ ಸಂಜೆ ತಾಲೂಕಿನ ಛಬ್ಬಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ಜರುಗಿದ ಶ್ರೀ ದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು. ಸಮಾಜದ ಅಭಿವೃದ್ಧಿಯಲ್ಲಿ ದೇವಸ್ಥಾನಗಳು, ಮಠ-ಮಾನ್ಯಗಳು ತಮ್ಮದೇ ಆದ ಮಹತ್ವ ಹೊಂದಿವೆ. ಆದರೆ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಮೌಲ್ಯಗಳನ್ನು ನೀಡುವುದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಶಿಕ್ಷಣವು ವ್ಯಕ್ತಿಯ ಬದುಕನ್ನು ಮಾತ್ರವಲ್ಲದೆ ಇಡೀ ಕುಟುಂಬ ಹಾಗೂ ಸಮಾಜದ ಭವಿಷ್ಯವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದರ ಜತೆಗೆ ಅವರಲ್ಲಿ ಮಾನವೀಯತೆ, ಶಿಸ್ತು, ಸೇವಾ ಮನೋಭಾವ ಮತ್ತು ಉತ್ತಮ ಸಂಸ್ಕಾರಗಳನ್ನು ಬೆಳೆಸಬೇಕು. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜತೆಗೆ ಅಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೂ ಉತ್ತೇಜನ ನೀಡುವ ಅಗತ್ಯವಿದೆ ಎಂದರು.ಈಗಾಗಲೇ ಕ್ಷೇತ್ರ ಶಾಸಕರಾದಿಯಾಗಿ ಮುಖಂಡರು ದೇವಸ್ಥಾನ ಹಾಗೂ ಮಠಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವಂತೆ ಬೇಡಿಕೆ ಇಟ್ಟಿದ್ದು, ಹಂತ ಹಂತವಾಗಿ ಅನುದಾನ ನೀಡುವ ಭರವಸೆ ನೀಡಿದರು.
ಸಾನಿಧ್ಯ ವಹಿಸಿದ್ದ ಫಕೀರೇಶ್ವರ ಸಂಸ್ಥಾನ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ಮಾತನಾಡಿ, ಜನರ ಸೇವೆ ಮಾಡಿದರೆ ಅಧಿಕಾರ ನಮ್ಮ ಹತ್ತಿರ ಬಂದು ನಿಲ್ಲುತ್ತದೆ ಎನ್ನುವುದಕ್ಕೆ ಸಚಿವ ಕೆ.ಎಸ್. ಬಸವಂತಪ್ಪ ಸಾಕ್ಷಿ. ಇವರೊಬ್ಬ ಅಪರೂಪದ ರಾಜಕಾರಣಿ ಎಂದರು.
ರಾಜ್ಯದಲ್ಲಿ ಮುಜರಾಯಿ ಖಾತೆ ನಿರ್ವಹಿಸಿದವರು ಮುಂದಿನ ಚುನಾವಣೆಯಲ್ಲಿ ಸೋಲುತ್ತಾರೆ ಎಂಬ ನಂಬಿಕೆ ಇದೆ. ಈ ನಂಬಿಕೆಯನ್ನು ಹುಸಿಗೊಳಿಸಲು ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಸರಳ, ಸಜ್ಜನಿಕೆ ರಾಜಕಾರಣಿ ಕೆ.ಎಸ್. ಬಸವಂತಪ್ಪ ಅವರ ಪರವಾಗಿ ಪ್ರಚಾರಕ್ಕೆ ಹೋಗೋಣ ಎಂಬ ಫಕೀರ ದಿಂಗಾಲೇಶ್ವರ ಶ್ರೀಗಳ ಹೇಳಿಕೆಗೆ ವೇದಿಕೆ ಮೇಲಿದ್ದ ಇತರ ಪಕ್ಷಗಳ ಮುಖಂಡರು ತಬ್ಬಿಬ್ಬಾದರು.